ಶಕ್ತಿ ಯೋಜನೆಯಿಂದ ಪ್ರತಿ ದಿನ 1.10 ಕೋಟಿ ಜನ ಪ್ರಯಾಣ: ರಾಮಲಿಂಗ ರೆಡ್ಡಿ

ಶಕ್ತಿ ಯೋಜನೆಯಿಂದ ಪ್ರತಿ ದಿನ 1.10 ಕೋಟಿ ಜನ ಪ್ರಯಾಣ: ರಾಮಲಿಂಗ ರೆಡ್ಡಿ

ಕಲಬುರಗಿ: ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಮಾರ್ಚ್ ತಿಂಗಳಲ್ಲಿ ಸುಮಾರು 5800 ಬಸ್ಸುಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ ಅವರು ಹೇಳಿದ್ದಾರೆ.

ಗುರುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ 20 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಮಾನ್ಯ ಶಾಸಕರಾದ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಶಕ್ತಿ ಯೋಜನೆ ಜಾರಿ ಮುನ್ನ ರಾಜ್ಯದಲ್ಲಿ ಪ್ರತಿ ದಿನ 84 ಲಕ್ಷ ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಶಕ್ತಿ ಯೋಜನೆ ಕುರಿತು ವಿರೋಧ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದರು. ಈಗ ಯೋಜನೆ ಜಾರಿಯಾಗಿದೆ. ಕಳೆದ 8 ತಿಂಗಳ ಅವಧಿಯಲ್ಲಿ 139 ಕೋಟಿ ಜನ ಸಂಚಾರ ಮಾಡಿದ್ದಾರೆ. ಮಹಿಳಾ ಸಬಲೀಕರಣಕ್ಕೆ ದಿಟ್ಟ ಹೆಜ್ಜೆ ಇದಾಗಿದೆ ಎಂದು ಬಣ್ಣಿಸಿದರು.

ಸಮಾರಂಭದಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ಮಾನ್ಯ ಮುಖ್ಯಮಂತ್ರಿಗಳ ಸಲಹೆಗಾರರಾದ ಬಿ.ಆರ್.ಪಾಟೀಲ, ಶಾಸಕರಾದ ಎಂ.ವೈ.ಪಾಟೀಲ, ಕನೀಜ್ ಫಾತಿಮಾ, ಎಂ.ಎಲ್.ಸಿ. ತಿಪ್ಪಣ್ಣಪ್ಪ ಕಮಕನೂರ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತೆ ರೂಪಿಂದರ್ ಕೌರ್, ಕೆ.ಕೆ ಬಂದರಕಳ್ಳಿ, ಈಶ್ವರ ಹೊಸಮನಿ, ಗಂಗಾಧರ, ಡಿ.ಸಿ.ಸಿ. ಅಧ್ಯಕ್ಷ ಜಗದೇವ ಗುತ್ತೇದಾರ ಸೇರಿದಂತೆ ಇತರೆ ಅಧಿಕಾರಿಗಳು, ಸಾರಿಗೆ ಸಿಬ್ಬಂದಿಗಳು ಇದ್ದರು.

Related