ರಾಯಚೂರು: ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.
ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ ದಶಮಾನೋತ್ಸವ ಮತ್ತು 936 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿ ಮಾಡಲಿಲ್ಲ. ಈಗ ಕಾಂಗ್ರೆಸ್ ಮಾಡುತ್ತಿರುವ ಅಭಿವೃದ್ಧಿಯನ್ನು ಬಿಜೆಪಿಯವರು ಸಹಿಸದೆ ಸುಳ್ಳಿನ ಸರಮಾಲೆ ಹಂಚುತ್ತಾ ತಿರುಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸ್ವಪಕ್ಷ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ..!
ನಾವು ಈ ಚುನಾವಣೆ ವೇಳೆ 560 ಭರವಸೆಗಳನ್ನು ನೀಡಿದ್ದೆವು. ಇದರಲ್ಲಿ 235 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಸ್ಪಷ್ಟವಾಗಿ ತಿಳಿಸಿದರು.
2013 ರಿಂದ 2018 ರವರೆಗೆ ನಾವು ಆಡಳಿತ ನಡೆಸಿ ಕೊಟ್ಟ ಭರವಸೆಗಳೆಲ್ಲವನ್ನೂ ಈಡೇರಿಸಿ ಪ್ರಣಾಳಿಕೆಯಲ್ಲಿ ಇಲ್ಲದ ಹೆಚ್ಚುವರಿ 30 ಭರವಸೆಗಳನ್ನು ಈಡೇರಿಸಿ ದಾಖಲೆ ಮಾಡಿದ್ದೇವೆ. ಆದರೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದೇನು ಎಂದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದರು.
