ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ : ಸಿಎಂ

ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ : ಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿಯ ಕೇಂದ್ರ ನಾಯಕ ಅಮಿತ್ ಶಾ ಅವರು ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಿ ಬಿಜೆಪಿ ಪರ ಅಭ್ಯರ್ಥಿಗಳ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ.

ಇನ್ನು ರಾಜ್ಯಕ್ಕೆ ಎಂಟ್ರಿ ಕೊಟ್ಟಿರುವ ಅಮಿತ್ ಶಾ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ಮನವಿ ಮಾಡಿ ನಾಲ್ಕು ತಿಂಗಳು ಕಳೆದಿದೆ ನಯಾಪೈಸೆ ಕೊಟ್ಟಿಲ್ಲ, ಹಿಂದೆ ಬಿಜೆಪಿಯೇ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗಲೂ ಹೀಗೆಯೇ ಅನ್ಯಾಯ ಮಾಡಿದ್ದಿರಿ, ನಿಮಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಿ ಆರು ವರ್ಷಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ. ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ನಿಮ್ಮ ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಪರ ವಾಗ್ದಾಳಿ ನಡೆಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ?  ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ?.

ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.  ಅಂದಾಜು ₹33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ ₹17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜೊತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈ ವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ?

ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್ ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದುಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನೂ ಕರೆದಿಲ್ಲ, ಬರಪರಿಹಾರವನ್ನೂ ನೀಡಿಲ್ಲ ಯಾಕೆ? ಎಂದರು.

ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ, ಕನ್ನಡಿಗರಿಗೆ ದ್ರೋಹ ಎಸಗಬೇಡಿ, ಕನ್ನಡ ಭಾಷೆಯನ್ನು ತುಳಿಯಲು ಹೋಗಬೇಡಿ, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸಲು ಹೋಗಬೇಡಿ. ನಿಮ್ಮ ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು. ಇದರ ಹೊರತಾಗಿ ಅಡ್ಡಮಾರ್ಗದ ಮೂಲಕ ಚುನಾವಣೆಯನ್ನು ಎದುರಿಸಲು ಹೊರಟರೆ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶವೇ ಲೋಕಸಭಾ ಚುನಾವಣೆಯಲ್ಲಿ ಪುನರಾವರ್ತನೆಯಾಗುವುದು ಖಂಡಿತ ಎಂದು ಹೇಳಿದರು.

Related