ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.
ರಾಜ್ಯ ಮಾಲಿನ್ಯ ಮಂಡಳಿ ವಿಶ್ವ ಪರಿಸರ ದಿನದ ಅಂಗವಾಗಿ ಇಂದು (ಮಂಗಳವಾರ ಜೂನ್ 17) ರಂದು ಹಮ್ಮಿಕೊಂಡಿದ್ದ ಮ್ಯಾರಥಾನ್ ಗೆ ವಿಧಾನಸೌಧದ ಎದುರು ಚಾಲನೆ ನೀಡಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಅನೇಕ ರೈಲ್ವೇ ನಿಲ್ದಾಣಗಳಲ್ಲಿ ಕಾಲ್ತುಳಿತ, ಉತ್ತರ ಪ್ರದೇಶದ ದೇವಸ್ಥಾನವೊಂದರಲ್ಲಿ ನೂರಾರು ಜನ ಕಾಲ್ತುಳಿತಕ್ಕೆ ಒಳಗಾಗಿ ಸತ್ತರು. ಇದಕ್ಕೆಲ್ಲಾ ಯಾರು ಹೊಣೆ? 2 ದಿನದ ಹಿಂದೆ ನಾನು ಅಹಮದಾಬಾದ್ ಗೆ ಹೋಗಿದ್ದೆ. ನಾನೇನಾದರು ಆ ಘಟನೆ ಬಗ್ಗೆ ಕೇಂದ್ರ ಸರ್ಕಾರವನ್ನು ಗುರಿ ಮಾಡಿ ಮಾತನಾಡಿದ್ದೇನೆಯೇ? ಎಂದು ಖಡಕ್ಕಾಗಿ ಉತ್ತರಿಸಿದರು.
ಬಿಜೆಪಿಯವರು ಇರುವುದೇ ಹೆಣದ ಮೇಲೆ ರಾಜಕೀಯ ಮಾಡಲು. ಅವರು ಎಲ್ಲಾ ಕಾಲದಿಂದಲೂ ಅದೇ ಕೆಲಸ ಮಾಡುತ್ತಿದ್ದಾರೆ. ಬಂದ್ ವೇಳೆಯಲ್ಲಿ, ಗಂಗಾಧರ್ ಕೊಲೆ ಪ್ರಕರಣ ಸೇರಿದಂತೆ ಬೇಕಾದಷ್ಟು ಸಮಯದಲ್ಲಿ ಇದೇ ರೀತಿ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಸೈಕಲ್ ನಿಂದ ಜಾರಿಬಿದ್ದ ಡಿಕೆ ಶಿವಕುಮಾರ್!
ಕಾಲ್ತುಳಿತ ಪ್ರಕರಣದಲ್ಲಿ ಯಾರ್ಯಾರಿಗೆ ಶಿಕ್ಷೆ ಕೊಡಬೇಕೋ ಆ ಕೆಲಸವನ್ನು ಸರ್ಕಾರ ಮಾಡಿದೆ. ತನಿಖೆಗಾಗಿ ಏಕ ಸದಸ್ಯ ಆಯೋಗವನ್ನು ಸಹ ನೇಮಕ ಮಾಡಲಾಗಿದೆ. ಇಡೀ ದೇಶದಲ್ಲಿ ನೂರಾರು ಘಟನೆಗಳು ನಡೆದಿವೆ. ಆದರೂ ಕಾಂಗ್ರೆಸ್ ಪಕ್ಷ ಎಂದಿಗೂ ಹೆಣದ ಮೇಲೆ ರಾಜಕೀಯ ಮಾಡಿಲ್ಲ ಎಂದು ಹೇಳಿದರು.
