ಬೆಂಗಳೂರು: ಬಿಜೆಪಿಯವರು ಕೈಗೊಂಡಿರುವ ಧರ್ಮಸ್ಥಳ ಧರ್ಮಯಾತ್ರೆಯ ಕುರಿತಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಬಿಜೆಪಿ ಒಂದು ಠುಸ್ ಗಿರಾಕಿ ಎಂದು ಹೇಳಿದ್ದಾರೆ.
ನಗರದಲ್ಲಿದ್ದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಒಂದು ಠುಸ್ ಗಿರಾಕಿ. ಅವರು ಮಾಡುತ್ತಿರುವುದು ರಾಜಕಾರಣ. ಹಿರಿಯ ಅಧಿಕಾರಿ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖಾ ತಂಡವು ಅಚ್ಚುಕಟ್ಟಾಗಿ ತಮ್ಮ ಕೆಲಸ ನಿರ್ವಹಿಸುತ್ತಿದೆ ಎಂದರು.
ಆಧಾರವಿಟ್ಟುಕೊಂಡು ಆರೋಪ ಮಾಡಲಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಆರೋಪ ಮಾಡಿದವನನ್ನು (ಮಹೇಶ್ ಶೆಟ್ಟಿ ತಿಮರೋಡಿ) ಒದ್ದು ಒಳಗೆ ಹಾಕಲಾಗಿದೆ. ಆರೋಪ ಮಾಡಲು ಆತನ ಬಳಿ ದಾಖಲೆ ಏನಿದೆ? ನಮ್ಮ ನಡುವೆ ರಾಜಕೀಯವಾಗಿ ಸಾಕಷ್ಟು ಭಿನ್ನಾಭಿಪ್ರಾಯ ಹೊಂದಿರಬಹುದು ಆದರೆ ನಮ್ಮ ವಿರೋಧಿಗಳ ಬಗ್ಗೆ ಏನೇನೋ ಮಾತನಾಡುತ್ತಾನೆ ಎಂದು ನಾವು ಖುಷಿಪಡುವುದಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಾನು ಅಪ್ಪಟ ಕಾಂಗ್ರೆಸ್ಸಿಗ: ಡಿಕೆಶಿ
ಇಂದು ಅವರ ಬಗ್ಗೆ ಮಾತನಾಡಿದವರು, ನಾಳೆ ನಮ್ಮ ಬಗ್ಗೆಯೂ ಮಾತನಾಡುತ್ತಾರೆ. ಈ ಹಿಂದೆ ಮುಖ್ಯಮಂತ್ರಿಯವರು ಹಾಗೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಈ ರಾಜ್ಯದಲ್ಲಿ ಯಾರ ಸ್ವಾಭಿಮಾನಕ್ಕೂ ಧಕ್ಕೆ ಬರದಂತೆ ಕೆಲಸ ಮಾಡಬೇಕು. ರಾಜಕೀಯ ಮಾಡಲಿ, ರಾಜಕೀಯವಾಗಿ ಆರೋಪಗಳನ್ನು ಮಾಡಲಿ. ಆದರೆ ಆಧಾರಗಳನ್ನಿಟ್ಟುಕೊಂಡು ಆರೋಪ ಮಾಡಲಿ ಎಂದರು.
