ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ.
ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ. ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ. ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟುಮಾಡುವುದು ಬಿಜೆಪಿಯ ಹಳೆಯ ಚಾಳಿ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಂಡಿದ್ದಾರೆ.
ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದು:ಖ ಮತ್ತು ಸಂಕಟ ಇರುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ. ಇದನ್ನೂ ಓದಿ: ಬಿಜೆಪಿ ಬೃಹತ್ ಪ್ರತಿಭಟನೆ; ವಿಜಯೇಂದ್ರ, ಅಶೋಕ್, ಸೇರಿ ಪ್ರಮುಖರ ಬಂಧನ
2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು 2 ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಸಿಎಂ ಆಗಿದ್ದ ನರೇಂದ್ರ ಮೋದಿಯವರು ರಾಜೀನಾಮೆ ನೀಡಿಲ್ಲ ಮಾತ್ರವಲ್ಲ, ಇಲ್ಲಿಯ ವರೆಗೆ ಕನಿಷ್ಠ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ ಎಂದರು.
