ಬಜೆಟ್ ಮಂಡನೆ: ಕೃಷಿ ಯಲಯದ ಬಜೆಟ್ ಎಷ್ಟು?

ಬಜೆಟ್ ಮಂಡನೆ: ಕೃಷಿ ಯಲಯದ ಬಜೆಟ್ ಎಷ್ಟು?

ಬೆಂಗಳೂರು:  ಸಿಎಂ ಸಿದ್ದರಾಮಯ್ಯ 14ನೇ ಬಾರಿ ಬಜೆಟ್ ಮಂಡನೆ ಮಾಡುವುದರ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತೀ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.  ಗ್ಯಾರಂಟಿ ಜಾರಿ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಜೆಟ್ ಇದಾಗಿದೆ.

ಹಿಂದಿನ ಸರ್ಕಾರ 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿತ್ತು. ಈ ಬಾರಿ ಸಿದ್ದರಾಮಯ್ಯ ಮಂಡಿಸಿದ 3,27, 747 ಕೋಟಿ ಗಾತ್ರದ ಬಜೆಟ್ ಮಂಡನೆ.

ಕೃಷಿ ಮತ್ತು ತೋಟಗಾರಿಕೆ ಬಜೆಟ್: ಈ ಬಜೆಟ್ನಲ್ಲಿ ಕೃಷಿ ಮತ್ತು ತೋಟಗಾರಿಕೆ ಹೆಚ್ಚಿನ ಒತ್ತು ನೀಡಿದ್ದಾರೆ.

ಎತ್ತೆಮ್ಮೆ ಹೂಡುವುದು, ಉತ್ತೊಮ್ಮೆ ಹರಗುವುದು. ಬಿತ್ತೊಮ್ಮೆ ಹರಗಿ, ಕಳೆತೆಗೆದರಾ ಬೆಳೆಯು, ಎತ್ತುಗೈಯುದ್ದ ಸರ್ವಜ್ಞ ಎಂದು ಸರ್ವಜ್ಞರ ವಚನ ಹೇಳಿದ ಸಿಎಂ ಸಿದ್ಧರಾಮಯ್ಯ 2023-24ರ ಬಜೆಟ್ನಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಒಟ್ಟು 5,743.68 ಕೋಟಿ ರೂ. ಮೀಸಲಿಡುವ ಮೂಲಕ ಹೆಚ್ಚಿನ ಒತ್ತು ನೀಡಿದ್ದಾರೆ. ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.

  • ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ʻನವೋದ್ಯಮʼ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು.
  • ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ʻನಂದಿನಿʼ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸುವುದು.
  • ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ಸೌಲಭ್ಯ.
  • ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ ಬೀಜ ಬಂಡವಾಳ ಒದಗಿಸುವುದು.
  • ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕೆಪೆಕ್ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಐದು ಕೋಟಿ ರೂ. ನೆರವು ನೀಡುವುದು.

ಕೃಷಿ ಯಾಂತ್ರೀಕರಣಕ್ಕೆ ಪ್ರೋತ್ಸಾಹ: ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ 50 ಕೋಟಿ ರೂ. ಅನುದಾನ ನೀಡಲಾಗಿದೆ.

  • ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು.
  • ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು.
  • ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು.

 

 

 

Related