ಬೆಂಗಳೂರು: ಉತ್ತರ ಪ್ರದೇಶದಲ್ಲಿ ಕಳೆದ ಎರಡು ವಾರದಿಂದ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ದೇಶದ ವಿವಿಧ ಮೂಲೆಗಳಿಂದ ಭಕ್ತಾದಿಗಳು ಆಗಮಿಸುತ್ತಿದ್ದಾರೆ.
ಇನ್ನು ಕರ್ನಾಟಕ ರಾಜ್ಯದಿಂದಲೂ ಕೂಡ ಹಲವಾರು ಭಕ್ತಾದಿಗಳು ಪ್ರಯಾಗ್ ರಾಜಕೀಯ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.
ಇಂದು (ಬುಧವಾರ ಜ. 29) ಮೌನಿ ಅಮಾವಾಸ್ಯೆ ಪ್ರಯುಕ್ತ ಮಹಾಕುಂಭ ಮೇಳದಲ್ಲಿ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಕಾಲ್ತುಳಿತಕ್ಕೆ ಒಳಗಾಗಿ ಸುಮಾರು 15ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಬೆಳಗಾವಿ ಜಿಲ್ಲೆಯ ನಾಲ್ಕು ಜನ ಸಾವನ್ನಪ್ಪಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಕುಂಭ ಮೇಳದಲ್ಲಿ ಬೆಳಗಾವಿಯ 4 ಮಂದಿ ಸಾವು
ಈ ಕುರಿತು ಸೋಶಿಯಲ್ ಮೀಡಿಯಾದ ಎಕ್ಸ್ ಖಾಥೆಯಲ್ಲಿ ಸಂತಾಪ ಸೂಚಿಸಿರುವ ಅವರು, ಪ್ರಯಾಗ್ರಾಜ್ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ.
ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ತಿಳಿಸಿದ್ದಾರೆ.
