ಬೆಂಗಳೂರು: ಆರ್ಸಿಬಿ ತಂಡದ ವಿಜಯೋತ್ಸವ ಸಂದರ್ಭದಲ್ಲಿ 11 ಜನ ಆರ್ಸಿಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಇದು ಇತಿಹಾಸದ ಕರಾಳ ಅಧ್ಯಾಯ ಎಂದು ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬಹಿರಂಗವಾಗಿ ಪತ್ರ ಬರೆದಿರುವ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರ ಹೇಳಿಕೆ ಕಂಡನಿಯ ಎಂದಿದ್ದಾರೆ.
ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ನೀವು ಮತ್ತು ನಿಮ್ಮ ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ. ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ.
ಕುಟುಂಬ ಬೆಳಗಬೇಕಿದ್ದ ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ ಎಂದಿದ್ದಾರೆ.
ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ, ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ. ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ ಸಂದೇಶ ರವಾನೆಯಾಗಿದೆ. ಇಷ್ಟಾಗಿಯೂ ‘ಸರ್ಕಾರಕ್ಕೂ ಈ ಘಟನೆಗೂ ಸಂಬಂಧವಿಲ್ಲ. ಸರ್ಕಾರ ಈ ಘಟನೆಯ ಜವಾರಿಯನ್ನು ಹೊರಲಾಗದು’ ಎಂಬ ನಿಮ್ಮ ಹೇಳಿಕೆ ಪಲಾಯನವಾದ ಹಾಗೂ ನಿರ್ಲಜ್ಜತನದ ಹೊಣೆಗೇಡಿತನವನ್ನು ಪ್ರತಿಬಿಂಬಿಸುತ್ತಿದೆ. ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಿಮ್ಮ ನಡೆ ಪರಂಪರೆಯ ಕರ್ನಾಟಕದ ನೈತಿಕ ರಾಜಕಾರಣವನ್ನು ಅವಮಾನಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ಅವರು ಅಧಿಕಾರಕ್ಕಾಗಿ ಸಿಎಂ ಆಗಿದ್ದಾರೆ ಹೊರತಾಗಿ ಜನಸಾಮಾನ್ಯರಿಗಲ್ಲ: ನಿಖಿಲ್
ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಆದ್ದರಿಂದ ಇದರಲ್ಲಿ ಸರ್ಕಾರದ ಯಾವ ತಪ್ಪಿಲ್ಲ. ದುರ್ಘಟನೆ ನಡೆದಿರುವುದು ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ಎಂದು ಹೇಳಿಕೆ ನೀಡಿದ್ದೀರಿ. ಸುದೀರ್ಘ ರಾಜಕಾರಣ ಹಾಗೂ ಅಧಿಕಾರದ ಅನುಭವ ಹೊಂದಿರುವ ನಿಮ್ಮ ಬಾಯಿಂದ ಹೊರಟಿರುವ ಇಂಥಾ ಮಾತುಗಳಿಂದಾಗಿ ನಿಮ್ಮ ಪ್ರಬುದ್ಧತೆಯನ್ನು ನಾವು ಶಂಕಿಸುವಂತಾಗಿದೆ ಎಂದು ಹೇಳಿದ್ದಾರೆ.
