ಅಭಿವೃದ್ಧಿ ನಿಗಮ ಕಾರ್ಯಾರಂಭಕ್ಕೆ ಕ್ರಮ ಜರುಗಿಸಲು ಸರ್ಕಾರಕ್ಕೆ ಆಗ್ರಹ

ಅಭಿವೃದ್ಧಿ ನಿಗಮ ಕಾರ್ಯಾರಂಭಕ್ಕೆ ಕ್ರಮ ಜರುಗಿಸಲು ಸರ್ಕಾರಕ್ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ನೇಕಾರ ಸಮುದಾಯವು 60 ಲಕ್ಷ ಜನಸಂಖ್ಯೆ ಹೊಂದಿದ್ದು, ಶೈಕ್ಷಣಿಕ, ರಾಜಕೀಯ ಹಾಗೂ ಆರ್ಥಿಕ ಬಲವರ್ಧನೆಗಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ “ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ” ವನ್ನು ಸ್ಥಾಪಿಸಲಾಗಿತ್ತು. ರಾಜ್ಯದಲ್ಲಿ ಈಗಿನ ಸರ್ಕಾರದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ಕಾರ್ಯಾರಂಭಕ್ಕೆ ನೇಕಾರ ಸಮುದಾಯಗಳ ಒಕ್ಕೂಟದಿಂದ ವಿನಂತಿಯನ್ನು ಮಾಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾಗಿರುವ ಬಿ ಎಸ್ ಸೋಮಶೇಖರ ಹೇಳಿದರು.

ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ “ಜಾತಿಗಣತಿ” ವಿಷಯ ಹೆಚ್ಚು ಪ್ರಾಮುಖ್ಯತೆಯನ್ನು ಪಡೆಯುತ್ತಿದೆ. ಸಿದ್ದರಾಮಯ್ಯ ರವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೈಗೊಂಡಿದ್ದ “ಜಾತಿಗಣತಿ” ಕಾಂತರಾಜ್ ಆಯೋಗ ವರದಿ ಸಮೀಕ್ಷೆ ಪೂರ್ಣಗೊಂಡಿತ್ತು. ಮತ್ತೊಮ್ಮೆ ಸಿದ್ದರಾಮಯ್ಯರವರೇ ಮುಖ್ಯಮಂತ್ರಿಗಳಾಗಿದ್ದಾರೆ. ಆದಕಾರಣ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲ ತಂದುಕೊಡಬಲ್ಲ “ಜಾತಿಗಣತಿ” ವರದಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದರು.

ನೇಕಾರ ಸಮುದಾಯಗಳು ಸಂಘಟನೆ ಹಾಗೂ ಅಭಿವೃದ್ಧಿ ಉದ್ದೇಶದಿಂದ ಫೆಬ್ರುವರಿ ತಿಂಗಳಿನಲ್ಲಿ ಬಾಗಲಕೋಟೆಯಲ್ಲಿ “ಬೃಹತ್ ನೇಕಾರರ ಸಮುದಾಯಗಳ ಸಮಾವೇಶವನ್ನು” ಆಯೋಜಿಸಿಕೊಂಡಿದೆ. ಈ ಸಮಾವೇಶಕ್ಕೆ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ರವರನ್ನು ಉದ್ಘಾಟನೆಗೆ ಆಹ್ವಾನಿಸಲಾಗುವುದು. ಬೃಹತ್ ಸಂಖ್ಯೆಯಲ್ಲಿ ನೇಕಾರರು ಬಾಗಲಕೋಟೆ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ-ಬೆಟಗೇರಿ, ಹಾವೇರಿ, ಬಿಜಾಪುರ, ಕೊಪ್ಪಳ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ನೇಕಾರರು ಬಾಗವಹಿಸಲಿದ್ದಾರೆ. ನೇಕಾರ ಸಮುದಾಯಗಳ ಒಕ್ಕೂಟದಿಂದ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಬಗ್ಗೆ ಮನವಿಯನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.

Related