ಕೋವಿಡ್ ಆರೈಕೆ ಕೇಂದ್ರದಲ್ಲಿ ಸೌಲಭ್ಯಗಳಿಲ್ಲ

ಕೋವಿಡ್ ಆರೈಕೆ ಕೇಂದ್ರದಲ್ಲಿ ಸೌಲಭ್ಯಗಳಿಲ್ಲ

ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭಿಸುತ್ತಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕ ಸೌಲಭ್ಯಗಳಿಲ್ಲ. ಸರ್ಕಾರ ಕೂಡಲೇ ಆ ಕುರಿತು ಗಮನ ಹರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಪ್ರತಿಪಕ್ಷಗಳು ಸಲಹೆ ನೀಡಿದರೆ ಗಂಭೀರವಾಗಿ ಪರಿಗಣಿಸುವುದಿಲ್ಲ. ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದರು.

ಕೊರೊನಾ ವಿಚಾರದಲ್ಲಿ ಸರ್ಕಾರ ಕೈಗೊಂಡ ಕ್ರಮಗಳಿಗೆ ನಾವು 3-4 ತಿಂಗಳು ಸಂಪೂರ್ಣವಾಗಿ ಸಹಕಾರ ನೀಡುತ್ತಾ ಬಂದೆವು. ಎಲ್ಲಿಯೂ ಮಾತನಾಡಲಿಲ್ಲ. ಹಾಗೆಂದು ಕೊರೊನಾ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದರೂ ಸುಮ್ಮನೇ ಕೂರಬೇಕಿತ್ತೇ ? ಪ್ರತಿಪಕ್ಷವಾಗಿ ನಮ್ಮ ಜವಾಬ್ದಾರಿ ನಿರ್ವಹಿಸುವುದೂ ತಪ್ಪೇ ?

ಉಪಕರಣಗಳ ಗುಣಮಟ್ಟದ ಬಗ್ಗೆ ಮಾತನಾಡಲು ನಾನು ಸರ್ವಜ್ಞ ಅಥವಾ ತಜ್ಞ ಅಲ್ಲದಿರಬಹುದು. ಆದರೆ, ತಜ್ಞರ ಅಭಿಪ್ರಾಯ ಕೇಳಬಹುದಲ್ಲವೇ ? ನಾವು ಒಂದು ಇಲಾಖೆಯ ಲೆಕ್ಕ ಕೇಳಿಲ್ಲ. ಐದಾರು ಇಲಾಖೆಗಳು ಮಾಡಿರುವ ಖರ್ಚಿನ ಬಗ್ಗೆ ಲೆಕ್ಕ ಕೇಳಿದ್ದೇವೆ. ಮಾಹಿತಿ ಕೋರಿ ವಾರದ ಹಿಂದೆಯೇ ಪತ್ರ ಬರೆದಿದ್ದರೂ ಮುಖ್ಯ ಕಾರ್ಯದರ್ಶಿಗಳಿಂದ ಈ ವರೆಗೆ ಉತ್ತರ ಬಂದಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ ಹಾಗೂ ಬಿಬಿಎಂಪಿ ಸದಸ್ಯರಾದ ಶಿವರಾಜ್ ಹಾಜರಿದ್ದರು.

Related