ಬೆಂಗಳೂರು: ಆರ್ಸಿಬಿ ತಂಡದ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಗುರುವಾರ ಜೂನ್ 05) ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಯಿತು ಎಂದು ತಿಳಿದುಬಂದಿದೆ.
ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಎಂದಿನಂತೆ (ಗುರುವಾರ ಜೂನ್ 05) ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. (ಮಂಗಳವಾರ ಜೂನ್ 04) ರಂದು ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.
ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.
ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದುರು.
ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. 3 ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.
