ಕಲುಷಿತ ನೀರು ಸೇವಿಸಿ 1 ಸಾವು, 48 ಜನ ಅಸ್ವಸ್ಥ

ಕಲುಷಿತ ನೀರು ಸೇವಿಸಿ 1 ಸಾವು, 48 ಜನ ಅಸ್ವಸ್ಥ

ಮೈಸೂರು: ಕಲುಷಿತ ನೀರು ಸೇವನೆ ಮಾಡಿ ಸುಮಾರು 48ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಒಬ್ಬ ಯುವಕ ಸಾವನ್ನುಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಇನ್ನು ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಕಾರಣ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಹೌದು, ಕಲುಷಿತ ನೀರು ಸೇವಿಸಿ ಕನಕರಾಜು (24) ಎಂಬ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಇಂದು (ಮಂಗಳವಾರ ಮೇ 21) ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮುಂಜಾಗ್ರತಾ ಕ್ರಮವಾಗಿ ಕೆ.ಸಾಲುಂಡಿ ಗ್ರಾಮಕ್ಕೆ ವೈದ್ಯಾಧಿಕಾರಿಗಳ ತಂಡದೊಂದಿಗೆ ಆಂಬ್ಯುಲೆನ್ಸ್​ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕುಮಾರಸ್ವಾಮಿ ಮಾಹಿತಿ ತಿಳಿಸಿದ್ದಾರೆ.

ಇನ್ನು ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದ್ದಾರೆ. ಇದನ್ನೂ ಓದಿ: ಇಂದು ಭಯೋತ್ಪಾದನಾ ವಿರೋಧಿ ದಿನ

ಆಸ್ಪತ್ರೆಗೆ ಶಾಸಕ ಜಿ.ಟಿ. ದೇವೇಗೌಡ ಭೇಟಿ: ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವವರನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮೃತ ಯುವಕನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿದರು.

Related