ಬೆಳಗಾವಿ: ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ನಾನು, ಪಕ್ಷ, ಹೈಕಮಾಂಡ್ ಉಂಟು. ಮಾಧ್ಯಮದವರು ಯಾರೋ ಹೇಳಿದ ಸುಳ್ಳನ್ನು ನಂಬಬೇಡಿ. ಶಿವಕುಮಾರ್ ಅವರಿವರನ್ನು ಭೇಟಿ ಮಾಡಿದರು, ಪಕ್ಷದಲ್ಲಿ ಬಂಡಾಯವಿದೆ ಎಂದೆಲ್ಲಾ ಹೇಳಬೇಡಿ ಎಂದು ಕಿಡಿಯಾದರು.
ಕಾಂಗ್ರೆಸ್ ಪಕ್ಷದಲ್ಲಿ ಯಾವ ಬಂಡಾಯವೂ ಇಲ್ಲ. ಯಾರ ಜೊತೆಯೂ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ನಾನು ಎಲ್ಲರನ್ನು ಸಮಾನವಾಗಿ ಕಾಣುವ ಅಧ್ಯಕ್ಷ ಸ್ಥಾನದಲ್ಲಿದ್ದು, ನನಗೆ ಎಲ್ಲರೂ ಒಂದೇ. ಎಲ್ಲರನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯ” ಎಂದರು. ಇದನ್ನೂ ಓದಿ: ಕಾಲಜ್ಞಾನಿ ಮಹಾಯೋಗಿ ಶ್ರೀ ವೇಮನ 613ನೇ ಜಯಂತಿ ಆಚರಣೆ
ಯಾರದ್ದೋ ಸುಳ್ಳನ್ನು ನಂಬಬೇಡಿ
ಯಾರೋ ಸುಳ್ಳು ಮಾಹಿತಿ ನೀಡಿ ಮಾಧ್ಯಮಗಳ ಘನತೆಯನ್ನೇ ಹಾಳು ಮಾಡುತ್ತಿದ್ದಾರೆ. ನಾನು ಭಾನುವಾರ ಹಿರಿಯ ಶಾಸಕರ ಮನೆಗೆ ಭೇಟಿ ನೀಡಿದ್ದೆ. ಅವರಿಗೆ ಯಾರ ಜೊತೆಯೋ ಜಗಳ ಇತ್ತಂತೆ ಎಂದು ಒಂದಷ್ಟು ಟಿವಿ ಮಾಧ್ಯಮಗಳು ನೂತನ ಕಥೆಯನ್ನು ಸೃಷ್ಟಿಸಿದ್ದವು. ಫಿರೋಜ್ ಸೇಠ್ ಅವರು ಪಕ್ಷದ ಹಿರಿಯ ನಾಯಕರು. ನನ್ನ ಜೊತೆ ಶಾಸಕರಾಗಿ ಕೆಲಸ ಮಾಡಿದ್ದಾರೆ. ಬೆಳಗಾವಿಯಲ್ಲಿ ಸಮಾವೇಶ ನಡೆಯುತ್ತಿದೆ. ಅವರನ್ನು ಈ ಸಮಾವೇಶದ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ. ಸಂಘಟನೆ ದೃಷ್ಟಿಯಿಂದ ಜಿಲ್ಲಾ ಅಧ್ಯಕ್ಷರ ಜೊತೆ ಹೋಗಿ ಭೇಟಿ ಮಾಡಿದ್ದೆ. ಆದರೆ, ಮಾಧ್ಯಮಗಳು ಏನೇನೋ ವರದಿ ಬಿತ್ತರ ಮಾಡಿದವು. ಯಾರೋ ಸ್ಟೋರಿ ಪ್ಲಾಂಟ್ ಮಾಡಿದ್ದನ್ನು ನಂಬಿ ಮಾಧ್ಯಮಗಳು ತಮ್ಮ ಘನತೆಯನ್ನು ಹಾಳು ಮಾಡಿಕೊಳ್ಳಬಾರದು ಎಂದರು.
ಕಾಂಗ್ರೆಸ್ ನ 60 ಜನ ಶಾಸಕರು ಬಿಜೆಪಿಗೆ ಬರುತ್ತಾರೆ ಎನ್ನುವ ಯತ್ನಾಳ್ ಹೇಳಿಕೆಯು ನೀಚ ರಾಜಕಾರಣದ ಬಗ್ಗೆ ನೀವು ಪ್ರಶ್ನೆ ಮಾಡಿದರೆ ಹೇಗೆ? ಇಂತಹ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಕಾರ್ಯಕ್ರಮದ ಬಗ್ಗೆ ಗಮನಹರಿಸಿ. ನಿಮಗೆ ಯಾರು ಏನೇ ಹೇಳಿದ್ದರೂ ಅದೆಲ್ಲಾ ಸುಳ್ಳಿನ ಕಂತೆ. ಕಾಂಗ್ರೆಸ್ ಗೆ ಶಕ್ತಿ ತುಂಬಲು ಅನೇಕ ಹೋರಾಟ, ತ್ಯಾಗ ಮಾಡಲಾಗಿದೆ. ಈ ಬೆಳಗಾವಿ ಭೂಮಿಯಿಂದಲೇ ಗಾಂಧಿ ಬಾವಿಯಿಂದ ನೀರು ತೆಗೆದು ಸ್ವಚ್ಚಗೊಳಿಸಿ ಪಕ್ಷವನ್ನು ಅಧಿಕಾರಕ್ಕೆ ತರಲಾಗಿದೆ ಎಂದರು.
ನನಗೆ ಈ ವಿಚಾರದ ಬಗ್ಗೆ ಗೊತ್ತಿಲ್ಲ. ನನಗೆ ಎಲ್ಲರೂ ಒಂದೇ. ಕಾರ್ಯಕರ್ತರು, ಶಾಸಕರು, ಸಚಿವರು ಎಲ್ಲರೂ ಒಂದೇ. ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ಕೆಲಸ ಮಾಡುವವರ ಎದುರು ತಲೆಬಾಗಿ ಅವರ ಸೇವೆ ಮಾಡುತ್ತೇನೆ. ನನಗೆ ಪಕ್ಷವೇ ಮುಖ್ಯ. ನನಗೆ ಕೊಟ್ಟಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಕಾಲ, ಕಾಲದಿಂದಲೂ ನಿರ್ವಹಿಸಿಕೊಂಡು ಬಂದಿದ್ದೇನೆ ಎಂದರು.
