ಬೆಂಗಳೂರು: ಇಂದು ನಾಡಿನಾದ್ಯಂತ ಬಸವಜಯಂತಿಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರತಿಯೊಬ್ಬ ಕನ್ನಡಿಗರು ಹಾಗೂ ಭಾರತೀಯರು ಬಸವಣ್ಣನವರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಗರದಲ್ಲಿಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವಗುರು ಬಸವಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರು ಕೇವಲ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಾದ್ಯಂತ ತಮ್ಮ ವಚನಗಳನ್ನು ಸಾರಿ ಹೋಗಿದ್ದು ಅವರಂತವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದರು.
ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲಅ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ. ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.
