ಆನೇಕಲ್: ಕರ್ನಾಟಕ ರಾಜ್ಯದಲ್ಲಿ 2023ನೇ ಸಾಲಿನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ರೇಟರ್ ಬೆಂಗಳೂರು ಮಾಡಲು ಎಲ್ಲಾ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿದ್ದು, ಇದೀಗ ಆನೇಕಲ್ ತಾಲೂಕು ಗ್ರೇಟರ್ ಬೆಂಗಳೂರು ಭಾಗವಾಗುತ್ತಿರುವುದರಿಂದ ಆನೇಕಲ್ ಗೆ ಕುಡಿಯಲು ಕಾವೇರಿ ನೀರು ಮೆಟ್ರೋ ಕಾಮಗಾರಿ ಸೇರಿದಂತೆ ಹಲವು ಕಾಮಗಾರಿಗಳಿಗೆ ಸಿದ್ದಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಆನೇಕಲ್ ತಾಲ್ಲೂಕು ಹೆನ್ನಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇಂದು (ಶುಕ್ರವಾರ ಮೇ 02) ರಂದು ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ಶಿವಣ್ಣ, ಮಾಜಿ ಸಂಸದ ಸುರೇಶ್, ರಮೇಶ್ ಅವರು ನಿಮ್ಮನ್ನು ಬೆಂಗಳೂರು ನಗರ ವ್ಯಾಪ್ತಿಗೆ ಸೇರಿಸಬೇಕು ಎಂದು ನನ್ನ ಮೇಲೆ ಒತ್ತಾಯ ಹಾಕುತ್ತಿದ್ದಾರೆ. ಈ ಬಗ್ಗೆ ಮುಂದೆ ಚರ್ಚೆ ಮಾಡುತ್ತೇನೆ. ನಿಮ್ಮನ್ನು ಗ್ರೇಟರ್ ಬೆಂಗಳೂರಿನಲ್ಲಿ ಸೇರಿಸಲು ಚರ್ಚೆಯಾಗುತ್ತಿದೆ. ಎಲ್ಲಾ ಶಾಸಕರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.
ಆನೇಕಲ್ ತಾಲೂಕಿಗೆ 30 ಎಂಎಲ್ ಡಿ ನೀರನ್ನು ನೀಡಲು ಟೆಂಡರ್ ಕರೆಯಲಾಗಿದೆ. ಈ ಬಗ್ಗೆ ಶಾಸಕ ಶಿವಣ್ಣ ಅವರ ಜತೆ ಚರ್ಚೆ ಮಾಡಲಿದ್ದೇನೆ. ಜಿಗಣಿ, ಆನೇಕಲ್, ಸರ್ಜಾಪುರ, ಬನ್ನೇರುಘಟ್ಟಕ್ಕೆ ಮೆಟ್ರೋ ರೈಲು ಮಾರ್ಗ ವಿಸ್ತರಿಸಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸುಹಾಸ್ ಹತ್ಯೆ; BJP ರಾಜಕೀಯಕ್ಕೆ ಬಳಸಿಕೊಳ್ಳಬಾರದು: ಡಿಕೆಶಿ
ನಮಗೆ ಆನೇಕಲ್ ಬೇರೆಯಲ್ಲ ಕನಕಪುರ ಬೇರೆಯಲ್ಲ. ಈ ಕ್ಷೇತ್ರದ ಅಭಿವೃದ್ಧಿಗೆ ನಾವು ಬದ್ಧವಾಗಿದ್ದೇವೆ. ಈ ಕ್ಷೇತ್ರದಲ್ಲಿ ವಿದ್ಯಾವಂತರು, ಪ್ರಜ್ಞಾವಂತರಿದ್ದೀರಿ. ಒಂದೇ ಗ್ರಾಮ ಪಂಚಾಯ್ತಿಯಲ್ಲಿ ಇಷ್ಟು ದೊಡ್ಡ ಕಾರ್ಯಕ್ರಮ ಮಾಡುತ್ತಿದ್ದು, ನಿಮ್ಮ ಜತೆ ನಮ್ಮ ಸರ್ಕಾರ ಇದೆ ಎಂದು ಹೇಳಲು ನಾನು ಹಾಗೂ ರಾಮಲಿಂಗಾ ರೆಡ್ಡಿ ಅವರು ಬಂದಿದ್ದೇವೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಎಂದು ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ 4 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದು, ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಕಲಬುರ್ಗಿಯಲ್ಲಿ 1100 ಕೋಟಿ ಮೊತ್ತದ ಯೋಜನೆಗೆ ಭೂಮಿ ಪೂಜೆ ಮಾಡಲಾಗಿದೆ ಎಂದು ಹೇಳಿದರು.
