ಬೆಂಗಳೂರು: ಐಪಿಎಲ್ ನಲ್ಲಿ ಆರ್ಸಿಬಿ ತಂಡ ವಿಜಯ ಸಾಧಿಸಿರುವುದರಿಂದ ಬೆಂಗಳೂರು ನಗರದಲ್ಲಿ ರಾಜ್ಯ ಸರ್ಕಾರದಿಂದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನ ಮೃತಪಟ್ಟಿರುವ ಕುರಿತಾಗಿ ಇಂದು (ಶುಕ್ರವಾರ ಜೂನ್ 06 ರಂದು ಬಿಜೆಪಿ ಹಾಗೂ ಜೆಡಿಎಸ್ ಜಂಟಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ನಗರದಲ್ಲಿ ಇಂದು ಬಿಜೆಪಿ ಜೆಡಿಎಸ್ ನೇತೃತ್ವದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಫ್ಐಆರ್ ನಲ್ಲಿ ಕೆಎಸ್ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂ 1, ಡಿಸಿಎಂ ಆರೋಪಿ ನಂ 2, ಗೃಹ ಸಚಿವ ಆರೋಪಿ ನಂ 3 ಎಂದು ವಾಗ್ದಾಳಿ ನಡೆಸಿದರು.
ಕಾಲ್ತುಳಿತ ಹಾಗೂ 11 ಜನ ಅಮಾಯಕರ ಸಾವಿನ ಸಂಬಂಧ ಕೊನೆಗೂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ತೆಗೆದುಕೊಂಡು ರಾಜ್ಯ ಸರಕಾರಕ್ಕೆ ಛೀಮಾರಿ ಹಾಕಿದ ನಂತರ ಸರಕಾರ ಎಚ್ಚತ್ತುಕೊಂಡಿದೆ ಎಂದು ವಿಶ್ಲೇಷಿಸಿದರು. ಮುಖ್ಯಮಂತ್ರಿಗಳು, ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡುವ ಬದಲಾಗಿ ತಾವೇ ಜವಾಬ್ದಾರಿ, ನೈತಿಕ ಹೊಣೆ ಹೊತ್ತು ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ ಎಂದು ಮತ್ತೊಮ್ಮೆ ಒತ್ತಾಯಿಸಿದರು. ಇದನ್ನೂ ಓದಿ: ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಅರೆಸ್ಟ್!
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ), ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಪ್ರಮುಖವಾಗಿ ಆರೋಪಿಗಳೆಂದು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ. ಎಫ್ಐಆರ್ ತರುವಾಯ, ಮುಖ್ಯಮಂತ್ರಿಗಳು ಏಕಾಏಕಿ ಜಾಗೃತರಾಗಿದ್ದಾರೆ. ಮುಖ್ಯಮಂತ್ರಿಗಳು ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ಕಮೀಷನರ್ ಸೇರಿ 5 ಜನ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅರ್ಥಾತ್, ಮುಖ್ಯಮಂತ್ರಿಗಳು ಮೊನ್ನೆ ನಡೆದ ದುರ್ಘಟನೆ, 11 ಜನರ ಸಾವಿಗೆ ರಾಜ್ಯ ಸರಕಾರದಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳಲು ಪೊಲೀಸರನ್ನು ಹರಕೆಯ ಕುರಿಯಾಗಿ ರಾಜ್ಯ ಸರಕಾರ ಮಾಡಿದೆ ಎಂದು ಆರೋಪಿಸಿದರು.
