ಬೆಂಗಳೂರು: ರಾಜ್ಯದಲ್ಲಿ ಇಂದು (ಬುಧವಾರ ಜೂನ್ 11) ರಂದು ಬೆಳ್ಳಂಬೆಳಗ್ಗೆ ಎಂಟು ಕಡೆ ಇಡಿ ಅಧಿಕಾರಿಗಳು ಕಾಂಗ್ರೆಸ್ನ ಶಾಸಕ, ಮಾಜಿ ಸಚಿವ ಹಾಗೂ ಸಂಸದರ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿರುವುದರಿಂದ ರಾಜ್ಯ ರಾಜಕೀಯದಲ್ಲಿ ಸಂಚಲನವೇ ಸೃಷ್ಟಿಯಾಗಿದೆ.
ಹೌದು, ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ರಾಜ್ಯದ ಎಂಟು ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿದ್ದು, ಬೆಂಗಳೂರು ಸೇರಿದಂತೆ ಬಳ್ಳಾರಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಒಂದು ವರ್ಷಗಳ ಹಿಂದೆ ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿದ್ದು, ಈ ವಾಲ್ಮೀಕಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ನ ಮಾಜಿ ಸಚಿವ, ಶಾಸಕ, ಸಂಸದರಿಗೆ ಇಡಿ ಶಾಕ್
ಇನ್ನು ಬಳ್ಳಾರಿಯಲ್ಲಿ 5 ಸ್ಥಳ, ಬೆಂಗಳೂರಿನಲ್ಲಿ 3 ಕಡೆ ಇಡಿ ದಾಳಿ ನಡೆದಿದ್ದು, ಬಳ್ಳಾರಿ ಸಂಸದ ಇ.ತುಕಾರಾಂ, ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾಭರತ್ ರೆಡ್ಡಿ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಮತ್ತು ಕೂಡ್ಲಿಗಿ ಶಾಸಕ ಶ್ರೀನಿವಾಸ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.
