ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಮಾರು 3.75 ಲಕ್ಷ ಸುಸ್ತಿದಾರಿಗೆ ನೋಟಿಸ್ ಜಾರಿ ಮಾಡಿ ಬಾಕಿ ತೆರಿಗೆ ವಸೂಲಿ ಮಾಡಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯ ಆಯುಕ್ತರ ಕಛೇರಿಯಲ್ಲಿ ಇಂದು (ಸೋಮವಾರ ಜುಲೈ 28) ರಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಆಸ್ತಿ ತೆರಿಗೆ ಸಂಗ್ರಹಿಸಲು ಹೆಚ್ಚು ಆದ್ಯೆತೆ ನೀಡುತ್ತಿದ್ದು, ಇನ್ನೂ ಪರಿಣಾಮಕಾರಿಯಾಗಿ ಆಸ್ತಿ ತೆರಿಗೆ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ 3.75 ಲಕ್ಷ ಸುಸ್ತಿದಾರರು ಸುಮಾರು 700 ರಿಂದ 800 ಕೋಟಿ ರೂ. ಪಾಲಿಕೆಗೆ ಬಾಕಿ ಆಸ್ತಿ ತೆರಿಗೆ ಪಾವತಿಸಬೇಕಿದ್ದು, ಈ ನಿಟ್ಟಿನಲ್ಲಿ ಎಸ್.ಎಂ.ಎಸ್ ಹಾಗೂ ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಲಾಗುವುದು. ಈಗಾಗಲೇ ಪಾವತಿಸಿದ್ದಲ್ಲಿ ಯಾವುದೇ ಸಮಸ್ಯೆ ಇಲ್ಲ. ಪಾವತಿಸಬೇಕಿದ್ದಲ್ಲಿ ಕೂಡಲೆ ಬಾಕಿ ಆಸ್ತಿ ತೆರಿಗೆ ಪಾವತಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಹೊಸ ಖಾತಾಗಾಗಿ 50 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಪಾಲಿಕೆಗೆ ಸಲ್ಲಿಕೆಯಾಗಿವೆ. ಅವುಗಳನ್ನು ಆದ್ಯತೆ ಮೇರೆಗೆ ಮಾಡಬೇಕು. ಇದರಿಂದ ಪಾಲಿಕೆಗೆ ಹೆಚ್ಚು ಆಸ್ತಿ ತೆರಿಗೆ ಸಂಹ್ರಹಿಸಲು ಸಹಕಾರಿಯಾಗಲಿದ್ದು, ಅದಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಎ-ಖಾತಾ ಪಡೆಯಲು ಯಾರಿಗೂ ಲಂಚ ನೀಡಬೇಡಿ: ಮಹೇಶ್ವರ ರಾವ್
ಎ-ಖಾತಾಗೆ ಶೀಘ್ರ ಆನ್ ಲೈನ್ ವ್ಯವಸ್ಥೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಎ-ಖಾತಾಗಳನ್ನು ನೀಡುವ ಸಲುವಾಗಿ ಕರ್ನಾಟಕ ಸರ್ಕಾರವು ಆದೇಶದ ಹೊರಡಿಸಿದೆ. ಅದರಂತೆ, ನಾಗರಿಕರು ಎ-ಖಾತಾಗೆ ಅರ್ಜಿ ಸಲ್ಲಿಸುವ ಸಲುವಾಗಿ ಶೀಘ್ರ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಲು ಸೂಚನೆ ನೀಡಿದರು.
ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ
ನಗರದಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಆದ್ಯತೆಯ ಮೇಲೆ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ವಾರ್ಡ್ ರಸ್ತೆಗಳಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಕ್ತ ಕ್ರಮ ಕೈಗೊಂಡು ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮಳೆಗಾಲದ ವೇಳೆ ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಅನ್ನು ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
