ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೀದರ್ ಜಿಲ್ಲೆಯಲ್ಲಿ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಜೊತೆ ಮಹತ್ವದ ಸಭೆ ನಡೆಸಿದರು. ಇನ್ನು ಈ ಸಭೆಯಲ್ಲಿ ಬೀದರ್ ಜಿಲ್ಲೆಗೆ ಸಂಬಂಧಿಸಿದಂತಹ ಹಲವು ಕಾಮಗಾರಿಗಳ ಬಗ್ಗೆ ಮಾತುಕತೆ ನಡೆಯಿತು ಎಂದು ತಿಳಿದುಬಂದಿದೆ.
ಅಲ್ಲದೆ ಅನುಭವ ಮಂಟಪದ ಕಾಮಗಾರಿಯನ್ನು ಒಂದು ವರ್ಷದಲ್ಲಿ ಮುಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಬೀದರ್ ಜಿಲ್ಲೆಯ ಶಾಸಕರು ಮತ್ತು ಉಸ್ತುವಾರಿ ಸಚಿವರ ಸಭೆ ಬಳಿಕ ಮಾತನಾಡಿದ ಅವರು, ಬೀದರ್ ಅಭಿವೃದ್ಧಿ, ಅರಣ್ಯ ಇಲಾಖೆ, ಪೌರಾಡಳಿತ ಇಲಾಖೆಗಳ ಬಗ್ಗೆ ಚರ್ಚೆ ಆಗಿದೆ. ಅನುಭವ ಮಂಟಪದ ಕೆಲಸ 750 ಕೋಟಿ ರೂ. ವೆಚ್ವದಲ್ಲಿ ಶುರುವಾಗಿದೆ. ಒಂದು ವರ್ಷದೊಳಗೆ ಕಾಮಗಾರಿ ಮುಗಿಯಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
