ಬೆಂಗಳೂರು: ಕೊಪ್ಪಳದ ಗವಿಸಿದ್ದಪ್ಪ ನಾಯಕರ ಕೊಲೆ ಪ್ರಕರಣವನ್ನು ಎನ್.ಐ.ಎಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಮುಸ್ಲಿಂ ಮತಾಂಧರಿಂದ ಹತ್ಯೆಯಾದ ಕೊಪ್ಪಳದ ಗವಿಸಿದ್ದಪ್ಪ ನಾಯಕ ಅವರ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿ-ಜೆಡಿಎಸ್ ನಿಯೋಗವು ಇಂದು (ಬುಧವಾರ ಆ. 13) ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ ಅವರು, ಕಾನೂನಿನಡಿ ಈ ಬಡ ಕುಟುಂಬಕ್ಕೆ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡಬೇಕು. 2 ಎಕರೆ ಜಮೀನು ನೀಡಬೇಕು, ಕುಟುಂಬದ ಸದಸ್ಯರಿಗೆ ಸರಕಾರಿ ನೌಕರಿ ಕೊಡಬೇಕು ಎಂದು ಆಗ್ರಹಿಸಿದರು.
ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ಮಾಜಿ ಸಚಿವ ಶ್ರೀರಾಮುಲು, ರಾಜು ಗೌಡ, ಶಿವನಗೌಡ ನಾಯಕ, ಜನಾರ್ದನ ರೆಡ್ಡಿ ಅವರು ಸಂತ್ರಸ್ತನ ಕುಟುಂಬದವರನ್ನು ಭೇಟಿ ಮಾಡಿದ್ದಾರೆ ಎಂದರು. ಇಂಥ ಕೊಲೆಗಡುಕರಿಗೆ ಈ ಕಾಂಗ್ರೆಸ್ ಸರಕಾರದ ಬಗ್ಗೆ ವಿಪರೀತ ವಿಶ್ವಾಸ ಇದೆ. ಇದರಿಂದ ಮಂಗಳೂರು ಸೇರಿ ವಿವಿಧೆಡೆ ಸರಣಿ ಕೊಲೆಗಳು ನಡೆಯುತ್ತಿವೆ ಎಂದು ಟೀಕಿಸಿದರು. ಇದನ್ನೂ ಓದಿ: ಮನೆ ಮನೆಯಲ್ಲೂ ತ್ರಿವರ್ಣ ಧ್ವಜ: ವಿಜಯೇಂದ್ರ
ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಸರಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದೇವೆ ಎಂದರು. ಮೃತರು ಬಿಜೆಪಿ ಇರಲಿ, ಕಾಂಗ್ರೆಸ್ ಅಥವಾ ಜೆಡಿಎಸ್ ಕಾರ್ಯಕರ್ತನೇ ಇರಲಿ; ಬೇರೆ ಪಕ್ಷದಲ್ಲಿ ಹಿಂದೂ ಕಾರ್ಯಕರ್ತ ಇರಬಾರದು ಎಂದೇನಿಲ್ಲ. ಇದು ಬಹಳ ಗಂಭೀರವಾದ ವಿಚಾರ. ಇಡೀ ರಾಜ್ಯದಲ್ಲಿ ಮಾತ್ರವಲ್ಲದೇ ದೇಶದಲ್ಲೇ ಸುದ್ದಿಯಾಗಿದೆ. ಇದಕ್ಕಾಗಿ ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಡ ಹೇರುವುದಾಗಿ ತಿಳಿಸಿದರು.
