ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ (ಸೋಮವಾರ ಆ. 25) ರಾತ್ರಿ ನಗರದ ರಸ್ತೆಗಳನ್ನು ವೀಕ್ಷಣೆ ಮಾಡಿ ತ್ವರಿತವಾಗಿ ದುರಸ್ತಿಗೊಂಡಿರುವ ರಸ್ತೆಗಳನ್ನು ಮುಚ್ಚಿಸುವ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.
ನಗರದ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ ನಡೆಸಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಬಾಗಲೂರು ರಸ್ತೆಯಲ್ಲಿ ಹೋದಾಗ ರಸ್ತೆ ಸ್ಥಿತಿ ನೋಡಿ ಬೇಸರವಾಗಿತ್ತು. ನಗರದ ಎಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. 5000ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 4400 ರಸ್ತೆ ಗುಂಡಿಗಳನ್ನು ಆದ್ಯತೆ ಮೇಲೆ ಮುಗಿಸಲು ಸೂಚನೆ ನೀಡಲಾಗಿದೆ. ಅದರಂತೆ ಕಳೆದ 4 ದಿನಗಳಿಂದ 2200 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ನಾಳೆ ಮಾಂಸ ಮಾರಾಟ ನಿಷೇಧ!
ನಗರದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸ ಮಾಡಲಾಗುತ್ತಿದ್ದು, ಸ್ಕೈವಾಕ್ ಗಳನ್ನು ಸ್ವಚ್ಛ ಮಾಡಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಿ ಹೋಗುವುದು ಮಾತ್ರವಲ್ಲ, ಗುಣಮಟ್ಟದ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಸೇರಿದಂತೆ ಮೂರೂ ಮಾದರಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
