ಬೆಂಗಳೂರು: ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ರಾಷ್ಟ್ರಪತಿಗೆ ಸಿಎಂ, ರಾಜ್ಯಪಾಲರಿಂದ ಸ್ವಾಗತ
ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ವಿಚಾರ ಅನೇಕ ವರ್ಷದಿಂದಲೂ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಹಾಗೂ ಎಚ್ಎಎಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
