ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಹೆಚ್ಚಾಗಿ ಕಂಡು ಬರುತ್ತಿದ್ದು, ಸುಮಾರು 21 ಕೆ.ಜಿ ಗಾಂಜಾ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ
ಹೌದು, ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಹನ ತಪಾಸಣೆ ವೇಳೆ ಪೊಲೀಸರು ಕಾರಿನಿಂದ 21 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ನಾಯಂಡಳ್ಳಿಯಿಂದ ಅನುಮಾನಾಸ್ಪದವಾಗಿ ಬರುತ್ತಿದ್ದ ಕಾರನ್ನು ತಡೆದ ಪೊಲೀಸರು, ಪರಿಶೀಲನೆಗೆ ಮುಂದಾಗಿದ್ದಾರೆ. ಕಾರಿನಲ್ಲಿ ಡ್ರೈವರ್ ಸೇರಿ ಮೂವರು ಪ್ರಯಾಣಿಸುತ್ತಿದ್ದರು. ಪೊಲೀಸರು ವಾಹನ ನಿಲ್ಲಿಸುತ್ತಿದ್ದಂತೆ ಭಯಭೀತರಾದ ಇಬ್ಬರು ಪೆಡ್ಲರ್ ಗಳು ಕಾರಿನ ಚಾಲಕನನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಕಾರು ಚಾಲಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಇದನ್ನೂ ಓದಿ: ಆಯುಕ್ತರು ಹಾಗೂ ಸ್ಥಳೀಯ ಶಾಸಕರಿಂದ ಜಂಟಿ ಕಾಮಗಾರಿ ಪರಿಶೀಲನೆ
ಮಂಗಳವಾರ ಸಂಜೆ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಭದ್ರ ರಸ್ತೆಯ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಚಾಲಕ ನಸೀಮ್ ಅಹ್ಮದ್ ಅವರನ್ನು 5,000 ರೂ.ಗೆ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಗೋಣಿ ಚೀಲಗಳಲ್ಲಿ ಕಳ್ಳಸಾಗಣೆ ಮಾಡಲಾದ ವಸ್ತು ಬಗ್ಗೆ ಅವನಿಗೆ ತಿಳಿದಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
