ಬೆಂಗಳೂರು: ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಏನು ಮಾಡಿದ್ದಾರೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟನಲ್ ರಸ್ತೆ ವಿಚಾರದಲ್ಲಿ ನಾನು ತಾಂತ್ರಿಕ ತಜ್ಞ ಅಲ್ಲ. ಅವರೂ ತಜ್ಞರಲ್ಲ. ಅದಕ್ಕಾಗಿಯೇ ಪ್ರತ್ಯೇಕ ತಾಂತ್ರಿಕ ತಜ್ಞರ ತಂಡವೇ ಇದೆ. ಅವರು ನಗರ ರೈಲು ಯೋಜನೆ ಮಾಡಬೇಕು ಎಂದು ಹೇಳುತ್ತಿದ್ದಾರೆ. ಅದನ್ನು ಮಾಡಲಿ, ಅದರಲ್ಲಿ ತಪ್ಪೇನು ಇಲ್ಲ. ಇದಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರದಿಂದ ಕೊಡಿಸಲಿ. ನಮ್ಮದೇ ರಾಜ್ಯದ ಸೋಮಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರ ನೆರವು ಪಡೆಯಲಿ, ಏನು ಬೇಕಾದರೂ ಮಾಡಲಿ. ಆವರು ಹೋರಾಟ ಮಾಡುವುದಾದರೆ ಮಾಡಲಿ, ಬೇಡ ಎಂದು ಹೇಳಿದವರು ಯಾರು? ಬಿಜೆಪಿಯಲ್ಲಿ ತೇಜಸ್ವಿ ಸೂರ್ಯ ಹಾಗೂ ಅಶೋಕ್ ಹೊರತಾಗಿ ಉಳಿದ ಯಾವುದೇ ನಾಯಕರು ಮಾತನಾಡುತ್ತಿಲ್ಲ ಎಂದು ತಿಳಿಸಿದರು.
ಸ್ಟೀಲ್ ಬ್ರಿಡ್ಜ್ ಮಾದರಿಯಲ್ಲೇ ಟನಲ್ ರಸ್ತೆ ಯೋಜನೆಯಲ್ಲಿ ನಾವು ನಮ್ಮ ಕೆಲಸ ಮಾಡುತ್ತೇವೆ. ನಮ್ಮ ಆಸಕ್ತಿ ನೋಡಿ ಜನರು ನಮ್ಮ ಪ್ರಯತ್ನಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಕೆಲಸ ಅನುಷ್ಠಾನ ಆಗಲಿದೆ ಎಂಬ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ಸುರಂಗ ರಸ್ತೆ ಎಂಬುದು ದೋಚುವ ತಂತ್ರ ಅಷ್ಟೇ: ಛಲವಾದಿ ನಾರಾಯಣಸ್ವಾಮಿ
ವರದಿ ಬಳಿಕ ದಿನಾಂಕ ನಿಗದಿ
ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆಗೆ ಇನ್ನೂ ದಿನಾಂಕ ಅಂತಿಮವಾಗಿಲ್ಲ. ನಾನು ಮನವಿ ಸಲ್ಲಿಸಿದ್ದೇನೆ. ಕಚೇರಿ ನಿರ್ಮಾಣ ಜಾಗದ ಕಾಗದ ಪತ್ರ ಸಿದ್ಧವಾಗುತ್ತಿದೆ. ಈ ಕಚೇರಿ ನಿರ್ಮಾಣ ವಿಚಾರದಲ್ಲಿ ಸಚಿವರು, ಸಂಸದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಯಾರ್ಯಾರು ಆಸಕ್ತಿ ತೋರಿದ್ದಾರೆ, ಯಾರು ತೋರಿಲ್ಲ ಎಂದು ವರದಿ ನೀಡುವಂತೆ ಹೈಕಮಾಂಡ್ ನಾಯಕರು ಕೇಳಿದ್ದಾರೆ. ನಾನು ವರದಿ ಸಿದ್ಧಪಡಿಸುತ್ತಿದ್ದು, ಅದನ್ನು ಕಳುಹಿಸಬೇಕು. ಆನಂತರ ಆವರು ದಿನಾಂಕ ನಿಗದಿ ಮಾಡುತ್ತಾರೆ ಎಂದು ವಿವರಿಸಿದರು.
