ಬೆಂಗಳೂರು: ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿಕರ್ನಾಟಕದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿರುವ ಅವರು, ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ಇದನ್ನೂ ಓದಿ: ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಶುಭಕೋರಿದ ಮೋದಿ
ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ. ನಾಡಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.ಜೈ ಭುವನೇಶ್ವರಿ, ಜೈ ಕರ್ನಾಟಕ ಎಂದು ಬರೆದಿದ್ದಾರೆ.
