ಮೈಸೂರು: ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು (ಸೋಮವಾರ ನ. 03) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು ಎಂದರು. ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿವೆ. ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಇದನ್ನೂ ಓದಿ: ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ: ಸಿಎಂ
ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿಮಾಹೆ 2000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು,ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆ ಎಂದರು.
