ಬೆಂಗಳೂರು: 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಈ ಸಂಬಂಧ ಶೀಘ್ರವೇ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದರು. ಇದನ್ನೂ ಓದಿ: ‘ಶುದ್ಧೀಕರಿಸಿದ ತ್ಯಾಜ್ಯ ನೀರಿನ ಮರುಬಳಕೆ’
ಇಲಾಖೆಯಲ್ಲಿ ಕೆಲ ಅಧಿಕಾರಿಗಳ ಅಚಾತುರ್ಯದಿಂದ 2011ನೇ ಸಾಲಿನ ಬದಲಾಗಿ 2023ನೇ ಸಾಲಿನಿಂದ ಗ್ರ್ಯಾಚುಟಿ ಜಾರಿಗೆ ಬಂದಿದೆ. ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಈಗಾಗಲೇ 3-4 ಬಾರಿ ಹಣಕಾಸು ಇಲಾಖೆಯವರ ಜೊತೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿ ಈ ಸಮಸ್ಯೆಯನ್ನು ಬಗೆ ಹರಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಕರ್ನಾಟಕದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷಗಳಾಗಿದ್ದು, ನವೆಂಬರ್ 19 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
