ಬೆಳಗಾವಿ: ರಾಜ್ಯದಲ್ಲಿ ಇತ್ತೀಚಿಗೆ ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿರುವುದರಿಂದ, ಡ್ರಗ್ಸ್ ಹಾವಳಿಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದ್ದು ಡ್ರಗ್ಸ್ ತಡೆಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆಯ ಕ್ರಮವಹಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ವಿಧಾನ ಪರಿಷತ್ತಿನಲ್ಲಿಇಂದು (ಗುರುವಾರ ಡಿ.11) ರಂದು ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಹೇಳಿದರು.
ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರೀಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ.
ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ನೇತೃತ್ವದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎ.ಎನ್.ಟಿ.ಎಫ್) ಪಡೆಯನ್ನು ಸ್ಥಾಪಿಸಲಾಗಿದೆ. ಇದನ್ನೂ ಓದಿ: ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್
ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಮತ್ತು ಜಾಲ ಕುರಿತು ಸ್ಥಳೀಯ ಬಾತ್ಮೀದಾರರು, ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ಬೀಟ್ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಬಗ್ಗೆ ವಿಶೇಷವಾಗಿ ಮಾಹಿತಿಯನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಎಂದು ಹೇಳಿದರು.
