ಬೆಂಗಳೂರು: ಅಣೆಕಟ್ಟುಗಳು ನಮ್ಮ ದೇಶದ ಶಕ್ತಿ ಹಾಗೂ ಪ್ರಗತಿಯ ಪ್ರತೀಕ. ಅಣೆಕಟ್ಟುಗಳು ನಮ್ಮ ಭವಿಷ್ಯವನ್ನು ಕಾಪಾಡಿ, ರೈತರನ್ನು ಸಶಕ್ತರನ್ನಾಗಿ ಮಾಡುತ್ತದೆ. ಸ್ವಚ್ಛ ಇಂಧನ ಸೃಷ್ಟಿಸಿ, ನಮ್ಮ ಸಮುದಾಯವನ್ನು ಕಾಯುತ್ತಿವೆ. ನಮ್ಮ ಪೀಳಿಗೆಯನ್ನು ಸುಸ್ಥಿರವಾಗಿಟ್ಟು ಕಾಪಾಡುತ್ತಿರುವ ರಕ್ಷಕನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಉಪಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಅವರು ಹೇಳಿದರು.
ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ನಜೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀರು ಸಮೃದ್ಧವಾದಷ್ಟು, ನಾಗರೀಕತೆ ಅಭಿವೃದ್ಧಿಯಾಗುತ್ತದೆ. ನಮ್ಮಲ್ಲಿರುವ ಅನೇಕ ಅಣೆಕಟ್ಟುಗಳು 60-70 ವರ್ಷಗಳ ಹಳೆಯದಾಗಿವೆ. ಹೀಗಾಗಿ ಅಣೆಕಟ್ಟುಗಳ ಮೂಲಸೌಕರ್ಯ ದುರಸ್ತಿ ಕಾಮಗಾರಿಗಳು ಅಗತ್ಯವಾಗಿವೆ. ಇದರ ಜತೆಗೆ ಅನಿರೀಕ್ಷಿತ ಹವಾಮಾನ ವೈಪರಿತ್ಯ ನಮಗೆ ಹೆಚ್ಚಿನ ಸವಾಲೊಡ್ಡಿದೆ. ಅತಿಯಾದ ಮಳೆ, ಪ್ರವಾಹ ದೇಶದೆಲ್ಲೆಡೆ ಸಮಸ್ಯೆಯಾಗಿ ತಲೆದೋರಿವೆ. ನಮ್ಮ ಊಹೆಗಳ ಆಧಾರದ ಮೇಲೆ ಭವಿಷ್ಯದ ಅಣೆಕಟ್ಟುಗಳ ನಿರ್ವಹಣೆ ಅಸಾಧ್ಯ. ಹೀಗಾಗಿ ಎಲ್ಲಾ ಸವಾಲಿಗೆ ಪೂರ್ವ ತಯಾರಿ ಮಾಡಿಕೊಳ್ಳುವ ಆಯ್ಕೆಯಾಗಿ ಉಳಿದಿಲ್ಲ, ಅನಿವಾರ್ಯತೆಯಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಎಂ ಭೇಟಿಯಾದ ನಟಿ ಜಯಮಾಲಾ
ನೀವೆಲ್ಲರೂ ಬೆಂಗಳೂರಿನಲ್ಲಿದ್ದೀರಿ. ಇಲ್ಲಿ 1.50 ಕೋಟಿ ಜನಸಂಖ್ಯೆ ಇದ್ದು, ವಿಶ್ವದಾದ್ಯಂತ ಕೈಗಾರಿಕೋದ್ಯಮಿಗಳು ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಇಡೀ ವಿಶ್ವ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಇಲ್ಲಿರುವ ಹವಾಮಾನ ಹಾಗೂ ಸಂಸ್ಕೃತಿ ಎಲ್ಲರ ಆಕರ್ಷಣೆಯಾಗಿದೆ. ಎಲ್ಲರೂ ಬೆಂಗಳೂರಿಗೆ ಬರಲು ಇಚ್ಛಿಸುತ್ತಿದ್ದಾರೆ. ಹೀಗಾಗಿ ಎಲ್ಲರಿಗೂ ನೀರು ಪೂರೈಸುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ನಾವು ಸಮತೋಲಿದ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದ್ದು, ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಯೋಜನೆ ಪರವಾಗಿ ತೀರ್ಪು ನೀಡಿದೆ. ಆಮೂಲಕ ನಾವು ಈ ಯೋಜನೆ ಜಾರಿ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿಗೆ ಕಾಯುತ್ತಿದ್ದೇವೆ. ಈ ಯೋಜನೆಯಿಂದ ಬೆಂಗಳೂರು ಸೇರಿದಂತೆ ಈ ಭಾಗದ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ 400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಗೆ ಸಹಕಾರಿಯಾಗಲಿದೆ ಎಂದು ವಿವರಿಸಿದರು.
