ಚಡಚಣ: ತಾಲೂಕಿನಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಶಾಸಕ ವಿಠ್ಠಲ ಕಟಕಧೋಂಡ ಅವರು ಟಾಸ್ಕ್ಫೋರ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಇಂದು (ಬುಧವಾರ ಏ. 01) ನಡೆದ ಗ್ರಾಪಂ ಹಾಗೂ ಸಂಬಂಧಿತ ಇಲಾಖೆಗಳ ಸಭೆಯಲ್ಲಿ ನೀರು ಪೂರೈಕೆ ಮತ್ತು ಕುರಿತು ವಿಸ್ತೃತ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು.
ಚಡಚಣ ತಾಲೂಕಿನ ಕಾಲುವೆಗೆ ಈಗಾಗಲೇ ಒಂದು ಟಿಎಂಸಿ ನೀರು ಬಿಡುಗಡೆ ಜೊತೆಗೆ ಹೆಚ್ಚುವರಿಯಾಗಿ ಒಂದು ಟಿಎಂಸಿ ನೀರು ಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾವಿನಾಳ, ಹತ್ತಳ್ಳಿ, ಬ್ಯಾರೇಜ್ ತುಂಬಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಉಮರಾಣಿ ಬ್ಯಾರೇಜ್ ನೀರನ್ನು 5 ಮೀಟರ್ ವರೆಗೆ ಯಾವಾಗಲೂ ಕಾಯ್ದುಕೊಳ್ಳಲು ಸೂಚಿಸಿದರು. ಈಗ ಭೀಮಾ ನದಿ ನೀರಿನ ಮಟ್ಟ ಕಡಿಮೆಯಾಗಿದೆ ಕೆಲವೊಂದು ಬಹು ಹಳ್ಳಿ ಕುಡಿಯುವ ನೀರಿನ ಸರಬರಾಜು ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದರು, ಮತ್ತೋಮ್ಮೆ ಭೀಮಾ ನದಿಗೆ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರ ಮನವಿ ಮಾಡಲಾಗುವುದು ಎಂದರು. ಇದನ್ನೂ ಓದಿ: ಶ್ರೀ ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕೆ.ಗೋಪಾಲಯ್ಯ
ಚಡಚಣ ತಾಲೂಕಿನ 13 ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಇಲ್ಲದಿರುವ ಪ್ರಸ್ತುತ ಪರಿಸ್ಥಿತಿಯಲ್ಲಿಯೂ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಂದಾಗಬೇಕು ಯಾವುದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಚಡಚಣ ಏತ ನೀರಾವರಿ ಯೋಜನೆ ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಪ್ರಸ್ತುತ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ಎರಡು ತಿಂಗಳು ಬೇಕಾಗುತ್ತದೆ ಎಂದು ಅಧಿಕಾರಿ ತಿಳಿಸಿದರು. ಈ ನಡುವೆ ತಾತ್ಕಾಲಿಕ ವ್ಯವಸ್ಥೆಗಳ ಮೂಲಕ ನೀರು ಸರಬರಾಜು ಸುಗಮಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಇದಲ್ಲದೆ, ಸರ್ಕಾರಿ ಶಾಲೆ ಕಾಲೇಜು, ವಸತಿ ನಿಲಯ ಕಲ್ಪಿಸಲು 30 ಎಕರೆ ಪ್ರದೇಶದ ಭೂಮಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕರು ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಿದರು.
