ಶಹಾಪುರ: ಜನತೆಯ ನಿರೀಕ್ಷೆಯನ್ನು ಸುಳ್ಳು ಮಾಡದೇ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ನಿರಂತರ ಶ್ರಮಿಸುತ್ತಿದ್ದು, ಗ್ರಾಮೀಣರ ಬದುಕು ಹಸನಾಗಿಸಲು ಅಗತ್ಯಕ್ಕೆ ತಕ್ಕಂತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ 1.30 ಕೋಟಿ ರೂ. ವೆಚ್ಚದ ಸಿ.ಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ವೀಕ್ಷಿಸಿ ಮಾತನಾಡಿ ಸಮಗ್ರ ಅಭಿವೃದ್ಧಿಯ ಕುರಿತು ಗಮನದಲ್ಲಿಟ್ಟುಕೊಂಡು ತಾಲೂಕಿನ ಪ್ರತಿ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಅಭಿವೃದ್ಧಿಯ ಜೊತೆಗೆ ಜನರ ಸಮಸ್ಯೆಗಳನ್ನು ಆಲಿಸಿ ಅಗತ್ಯವಾದ ಮೂಲ ಸೌಕರ್ಯ ಒದಗಿಸಲಾಗುತ್ತಿದೆ.
ಗ್ರಾಮಸ್ಥರ ಮೂಲಸೌಕರ್ಯ ಕಲ್ಪಿಸುವ ಬೇಡಿಕೆ ಇರುವುದರಿಂದ ಗ್ರಾಮದ ವಿವಿಧ ಬೀದಿಗಳ ಅಭಿವೃದ್ಧಿಗೆ ಕಾಯಕಲ್ಪ ಶುರುವಾಗಿದ್ದು, ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಮಾಡಿ ಮುಗಿಸಬೇಕು. ಧೀರ್ಘಕಾಲದಿಂದಲೂ ಹಾಳಾಗಿದ್ದ ರಸ್ತೆಗಳ ಸಮಸ್ಯೆಯಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದು, ಹೊಸ ರಸ್ತೆ ಚರಂಡಿ ಆಗಿದ್ದು, ಶಾಶ್ವತ ಪರಿಹಾರ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಳಿಕ ಗ್ರಾಮದ ಹನುಮಾನ್ ದೇವಸ್ಥಾನಕ್ಕೆ ತೆರಳಿ ದೇವಾಸ್ಥಾನದ ಜೀರ್ಣೋದ್ದಾರಕ್ಕೆ ಮತ್ತಷ್ಟು ಅನುದಾನ ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗುಂಡಪ್ಪ ತುಂಬಗಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಮಲ್ಲಣಗೌಡ ತಿಪ್ಪನಹಳ್ಳಿ, ಹಣಮಂತ್ರಾಯ ಪೂಜಾರಿ, ಬಸೀರ್ ಸಾಬ್, ಲಾಲನ್ ಸಾಬ್, ಖಾಜಾ ಸೇರಿದಂತೆ ಗ್ರಾಮಸ್ಥರು ಇದ್ದರು.
