ಬೆಂಗಳೂರು: ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ.
ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಬೇಕು ಎಂದರು.
ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ
ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ
ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲೂಕುಗಳನ್ನು ಹಾಗೂ 2410 ಗ್ರಾಮ ಪಂಚಾಯತ್ಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಟ್ಯಾಂಕರ್ಗಳ ಮೂಲಕ 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.
