ಬೆಂಗಳೂರು: ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಕುರ್ಚಿ ಕದನ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಡಿಕೆ ಬ್ರದರ್ಸ್ ದೆಹಲಿ ಅಂಗಳದಲ್ಲಿ ಕುರ್ಚಿ ಸರ್ಕಸ್ ಮಾಡುತ್ತಿದ್ದಾರೆ.
ಹೌದು, ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕೂಗು ಜೋರಾಗಿ ಕೇಳುತ್ತಿದ್ದು, ಇದೀಗ ಈ ಕುರಿತು ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಇಂದು (ಸೋಮವಾರ ಏಪ್ರಿಲ್ 27) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇ ತಿಂಗಳಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ, ಒಳ್ಳೆಯ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮ ಡಿ.ಕೆ. ಶಿವಕುಮಾರ್ ಸಾಹೇಬರು ಪಕ್ಷದ ಜವಾಬ್ದಾರಿಯನ್ನು ಹೊತ್ತು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಬರುವ ದಿನಗಳಲ್ಲಿ ಒಳ್ಳೆಯ ಸ್ಥಾನ ಸಿಗಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆಯಾಗಿದೆ. ಹೈಕಮಾಂಡ್ ಈ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ನಮಗಿದೆ ಎಂದಿದ್ದಾರೆ.
“ಮೇ 15 ರಂದು ಡಿ.ಕೆ. ಶಿವಕುಮಾರ್ ಅವರ ಜನ್ಮದಿನವಿದೆ. ಅಷ್ಟರೊಳಗೆ ಅವರಿಗೆ ಯಾವುದಾದರೂ ಸಂತೋಷದ ವಿಚಾರ ಅಥವಾ ‘ಸಿಹಿ ಸುದ್ದಿ’ ಬರಬಹುದು ಎಂಬ ಆಶಯ ನಮ್ಮದಾಗಿದೆ” ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ. ಇದನ್ನೂ ಓದಿ: CET ಪರೀಕ್ಷೆ ಕೀ ಉತ್ತರ ಪ್ರಕಟ
ಸಿದ್ದರಾಮಯ್ಯ ಅವರು ಪ್ರಸ್ತುತ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರಿಗೂ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎನ್ನುವುದು ನಮ್ಮ ಆಸೆ. ಹೈಕಮಾಂಡ್ ಏನೇ ನಿರ್ಧಾರ ತಗೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ. ವರಿಷ್ಠರು ಸೂಕ್ತ ನಿರ್ಧಾರ ತಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
