ಬೆಂಗಳೂರು: ಬಾರಿ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿರುವ ಬೋರಿಂಗ್ ಆಸ್ಪತ್ರೆಯ ಗೋಡೆ ಕುಸಿದು ಏಳು ಮಂದಿ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟ ಎಂಜಿನಿಯರ್ ನ್ನು ಕೂಡಲೇ ಅಮಾನತು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಗೋಡೆಗೆ ಹಾನಿ ಆಗಲಿದೆ ಅಂತ ಗೊತ್ತಿದ್ದರೂ ಕೂಡ ಕಾಮಗಾರಿ ಮಣ್ಣನ್ನು ಅಲ್ಲಿ ಸುರಿದಿದ್ದು ಯಾಕೆ ಎಂದು ಪ್ರಶ್ನಿಸಿ, ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ ಮಣ್ಣು ಸುರಿದಿದ್ದರೂ ಕೂಡ ನೀವು ಯಾಕೆ ನೋಡಿಕೊಳ್ಳಲಿಲ್ಲ ಎಂದು ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್ಗಳ ಪರಿಶೀಲನೆಗೆ ಆದೇಶ: ಶರಣಪ್ರಕಾಶ ಪಾಟೀಲ್
ನಿನ್ನೆ (ಏ.25) ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಕತ್ತರಿಸಬೇಕು. ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಲು ಸೂಚಿಸಿದರು.
