ಕೊಪ್ಪಳ: ಸ್ಥಳೀಯ ಕೇಂದ್ರೀಯ ವಿದ್ಯಾಲಯದ 10ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿನಿ ಅರ್ಪಿತಾ ಕಂಬಳಿ ಅವರು ಗುಜರಾತ್ನ ವಡ್ನಗರದಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಪ್ರೇರಣಾ ಅನುಭವಾತ್ಮಕ ಕಲಿಕಾ ಕಾರ್ಯಕ್ರಮ’ಕ್ಕೆ ಆಯ್ಕೆಯಾಗಿದ್ದಾರೆ.
ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಈ ಮಹತ್ವಾಕಾಂಕ್ಷೆಯ ಯೋಜನೆಯಡಿ, ದೇಶದ ವಿವಿಧ ಭಾಗಗಳಿಂದ ಆಯ್ದ ವಿದ್ಯಾರ್ಥಿಗಳಿಗೆ 7 ದಿನಗಳ ಕಾಲ ವಿಶೇಷ ವಸತಿ ಶಿಬಿರವನ್ನು ಆಯೋಜಿಸಲಾಗುತ್ತದೆ. ಐತಿಹಾಸಿಕ ವಡ್ನಗರದ ವರ್ನಾಕ್ಯುಲರ್ ಶಾಲೆಯಲ್ಲಿ ನಡೆಯುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳು, ಸಾಂಸ್ಕೃತಿಕ ಹೆಮ್ಮೆ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ಉದ್ದೇಶವನ್ನು ಹೊಂದಿದೆ.
ಅರ್ಪಿತಾ ಅವರು ತಮ್ಮ ನಾಯಕತ್ವದ ಸಾಮರ್ಥ್ಯ ಮತ್ತು ಶೈಕ್ಷಣಿಕ ಸಾಧನೆಯ ಆಧಾರದ ಮೇಲೆ ವಿವಿಧ ಹಂತದ ಸ್ಪರ್ಧೆಗಳಲ್ಲಿ ಜಯಗಳಿಸಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. 7 ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ಯೋಗ, ತಂತ್ರಜ್ಞಾನ ಆಧಾರಿತ ಕಲಿಕೆ ಮತ್ತು ನವೀನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಇವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಪಯಣಕ್ಕೆ 14 ವರ್ಷದ ಸಂಭ್ರಮ
ಈ ಸಾಧನೆಗಾಗಿ ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯರು ಹಾಗೂ ಶಿಕ್ಷಕ ವೃಂದದವರು ಅರ್ಪಿತಾ ಅವರನ್ನು ಅಭಿನಂದಿಸಿದ್ದಾರೆ. “ನಮ್ಮ ಶಾಲೆಯ ವಿದ್ಯಾರ್ಥಿನಿ ರಾಷ್ಟ್ರ ಮಟ್ಟದ ಇಂತಹ ಮಹತ್ವದ ವೇದಿಕೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿ,” ಎಂದು ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ತಮ್ಮ ಆಯ್ಕೆಯ ಕುರಿತು ಮಾತನಾಡಿದ ಅರ್ಪಿತಾ, “ದೇಶದ ವಿವಿಧ ಭಾಗಗಳಿಂದ ಬರುವ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಮತ್ತು ಹೊಸ ವಿಷಯಗಳನ್ನು ಕಲಿಯಲು ನಾನು ಉತ್ಸುಕಳಾಗಿದ್ದೇನೆ. ಈ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ,” ಎಂದು ತಿಳಿಸಿದ್ದಾರೆ.
