ಬೆಂಗಳೂರು: ಭಾರಿ ಬಿಸಿಲಿಗೆ ಕಂಗಾಲಾಗಿದ್ದ ರಾಜ್ಯದ ಜನತೆಗೆ ಮಳೆರಾಯ ತಂಪೆರದಿದ್ದಾನೆ.
ಹೌದು, ನಿನ್ನೆ (ಗುರುವಾರ ಮೇ 21) ರಾತ್ರಿ ಸುರಿದ ಮಳೆಯಿಂದಾಗಿ ಬೇಸಿಗೆಯಿಂದ ಕಂಗಾಲಾಗಿದ್ದ ಜನರು ನಿಟ್ಟಿಸಿರು ಬಿಡುವಂತಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಬೆಂಗಳೂರು ನಗರವೆಲ್ಲಾ ತಂಪು ತಂಪು ವಾತಾವರಣ ನಿರ್ಮಾಣವಾಗಿದೆ.
ಇನ್ನು ಕೇವಲ ಬೆಂಗಳೂರು ಮಾತ್ರವಲ್ಲದೆ ಇನ್ನೂ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೋಡಿದೆ.
ಅಲ್ಲದೇ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲೂ ಇಂದು ಜೋರು ಮಳೆಯಾಗುವ ಮುನ್ಸೂಚನೆ ನೀಡಿದ್ದು, ನಗರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಮುಂದಿನ 3 ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಇದನ್ನೂ ಓದಿ: ರೈಲ್ವೆ ಅಧಿಕಾರಿಗಳ ತರಾಟೆ ತೆಗೆದುಕೊಂಡ ಕೆ.ಜೆ.ಜಾರ್ಜ್
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಭಾಗದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
