ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಈ ಯೋಜನೆಗಳಲ್ಲಿ ಇದೀಗ ಕೆಲವು ಮಹತ್ವದ ಬದಲಾವಣೆಗಳನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಹೌದು, ರಾಜ್ಯದಲ್ಲಿರುವ ಪ್ರತಿಯೊಬ್ಬರೂ ಕೂಡ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅದರಲ್ಲೂ ಕೂಡ ಪ್ರಮುಖವಾಗಿ ಬೇರೆ ರಾಜ್ಯದವರು ಮತ್ತೆ ನಕಲಿ ಕಾರ್ಡ್ ಹಾಗೂ ನಕಲಿ ಕರೆಂಟ್ ಬಿಲ್ ತೋರಿಸಿ ಗ್ಯಾರಂಟಿಗಳ ಸೌಲತ್ತುಗಳನ್ನು ಪಡೆಯುತ್ತಿರುವವರಿಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದ್ದು, ಗ್ಯಾರಂಟಿ ಯೋಜನೆಗಳ ಪಾಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಈ ಕುರಿತು ನಿನ್ನೆ (ಭಾನುವಾರ ಮೇ 24) ರಂದು ನಡೆದ ಎಸ್ ಐ ಆರ್ ಸಭೆಯಲ್ಲಿ ಚರ್ಚೆ ನಡೆದಿದ್ದು, ಯೋಜನೆಗಳನ್ನು ಸಂಪೂರ್ಣ ಪಾರದರ್ಶಕವಾಗಿ ಹೊರ ತರಲು ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸದ್ಯ ಚಾಲ್ತಿಯಲ್ಲಿರುವ ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಮರುಪರಿಶೀಲಿಸಲಾಗುತ್ತಿದ್ದು, ನಕಲಿ ಅಥವಾ ಅನರ್ಹ ಕಾರ್ಡ್ದಾರರಿಗೆ ಗ್ಯಾರಂಟಿ ಹಣ ಹಾಗೂ ಉಚಿತ ವಿದ್ಯುತ್ ಕಟ್ ಆಗುವ ಸಾಧ್ಯತೆ ದಟ್ಟವಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟವರ ಹೆಸರಿನಲ್ಲಿ ಹಣ ಜಮಾ ಆಗಿರುವ ಪ್ರಕರಣಗಳು ಬೆಳಕಿಗೆ ಬಂದಿರುವುದರ ಜೊತೆಗೆ, ತೆರಿಗೆ ಪಾವತಿಸುವವರೂ ಈ ಯೋಜನೆಯ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮಾವಳಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ. ಇದನ್ನೂ ಓದಿ: ಜೆಡಿಎಸ್ ಪಕ್ಷ ಸೇರಿಕೊಂಡ ಬಿಗ್ ಬಾಸ್ ಖ್ಯಾತಿಯ ಜಾನ್ವಿ
ಇದಲ್ಲದೆ, ಒಂದೇ ಮನೆಯಲ್ಲೇ ಇಬ್ಬರಿಗೆ ಹಣ ಜಮಾ ಆಗಿರುವಂತಹ ಅಕ್ರಮಗಳ ಬಗ್ಗೆ ಕೂಡ ಪರಿಶೀಲನೆ ನಡೆಯುತ್ತಿದ್ದು, ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸಮಗ್ರ ಪರಿಶೀಲನೆ ನಡೆಸಲು ತೀರ್ಮಾನಿಸಲಾಗಿದ್ದು, ಪ್ರಸ್ತುತ ಇರುವ ಸುಮಾರು 1.24 ಕೋಟಿ ಫಲಾನುಭವಿಗಳ ಪಟ್ಟಿಯನ್ನು ಹೊಸ ಮಾರ್ಗಸೂಚಿಗಳ ಆಧಾರದ ಮೇಲೆ ಮರುಪರಿಶೀಲಿಸಲಾಗುತ್ತದೆ ಎಂದು ತಿಳಿದುಬಂದಿದೆ.
