ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಬೆನ್ನೆಲೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಜೊತೆ ಇಂದು ಗುರುವಾರ ವಿಧಾನಸೌಧದಲ್ಲಿ ಮಹತ್ವದ ಸಭೆಯ ನಡೆಸಿ ಮಾತುಕತೆ ನಡೆಸಿದ್ದಾರೆ.
ಸಭೆಯು ಉದ್ದೇಶಿಸಿ ಮಾತನಾಡಿದ ಅವರು, ರೌಡಿಗಳ ಹೆಡೆಮುರಿ ಕಟ್ಟಿ, ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರುಸಹಿತ ಕಿತ್ತೊಗೆಯಬೇಕು. ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 6 ಪ್ರಮುಖ ಯೋಜನೆಗಳನ್ನು ತಕ್ಷಣವೇ ಜಾರಿಗೆ ತರುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು ಎಂದಿರುವ ಸಿಎಂ, ಯಾವುದೇ ಕಾರಣಕ್ಕೂ ಆಡಳಿತ ಹಾದಿ ತಪ್ಪಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಪ್ರತಿಯೊಬ್ಬ ಅಧಿಕಾರಿಯೂ ನಿಮ್ಮ ಆತ್ಮಸಾಕ್ಷಿ ಒಪ್ಪುವ ಹಾಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಬೇಕು. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ ಜನ ಮೆಚ್ಚುವಂತೆ ಕೆಲಸ ಮಾಡುವ ಮೂಲಕ ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ, ನೀವೂ ಉತ್ತಮ ಹೆಸರು ಗಳಿಸಿ ಎಂದು ಕರೆ ನೀಡಿದ್ದಾರೆ.
ಅಲ್ಲದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಪೊಲೀಸ್ ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿದ ಸಿಎಂ, ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೊಡಬಾರದು ಎಂದಿದ್ದಾರೆ.
