ದೇವನಹಳ್ಳಿ: ಜೂನ್ 27ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ಕೆಂಪೇಗೌಡ ಥೀಮ್ ಪಾರ್ಕ್ ಅನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಚಿವ ಕೆಹೆಚ್ ಮುನಿಯಪ್ಪ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯ ಸಮೀಪ ಸುಮಾರು ₹20 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಥೀಮ್ ಪಾರ್ಕ್ನ್ನು ಜೂನ್ 27ರಂದು ಬೆಳಿಗ್ಗೆ 8.30ಕ್ಕೆ ಉದ್ಘಾಟಿಸಲಾಗುವುದು.
ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವು ಬೆಂಗಳೂರಿನ ಕೆಂಗೇರಿಯ ಕೆಂಪೇಗೌಡ ಬಡಾವಣೆಯಲ್ಲಿ ನಡೆಯಲಿದ್ದು, ಕೆಂಪೇಗೌಡರ ವಂಶಸ್ಥರು ನೆಲೆಸಿದ್ದ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಸಂಪ್ರದಾಯದಂತೆ ಜ್ಯೋತಿ ಯಾತ್ರೆ ಹೊರಡಲಿದೆ.
ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಕನಿಷ್ಠ 5000 ಜನರು ಭಾಗವಹಿಸಲಿದ್ದು, ಆವತಿಯಿಂದ ಜ್ಯೋತಿ ಯಾತ್ರೆ, ವಿಮಾನ ನಿಲ್ದಾಣದ ಕಾರ್ಯಕ್ರಮ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮ ಒಂದೇ ದಿನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿಯನ್ನು ಮತ್ತೊಂದು ದಿನ ವಿಜೃಂಭಣೆಯಿಂದ ಆಚರಿಸಲು ಸಮುದಾಯದ ಮುಖಂಡರೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಲಾಗುವುದು. ಇದನ್ನೂ ಓದಿ: ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಾ.ಶರಣಪ್ರಕಾಶ ಪಾಟೀಲ
ಜೂನ್ 27ರಂದು ಬೆಳಿಗ್ಗೆ 7.30ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ಬಳಿಕ ಬೆಳಿಗ್ಗೆ 8 ಗಂಟೆಗೆ ಆವತಿಯಲ್ಲಿ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಗುವುದು. ನಂತರ ಬೆಳಿಗ್ಗೆ 8.30ಕ್ಕೆ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ತೆರಳಲಾಗುವುದು.
ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ತೆರಳುವ ಸಾರ್ವಜನಿಕರಿಗಾಗಿ ಜಿಲ್ಲೆಯ ವಿವಿಧ ಭಾಗಗಳಿಂದ ಬೆಳಿಗ್ಗೆ 7 ಗಂಟೆಯಿಂದ ಬಸ್ ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗುವುದು. ಜಿಲ್ಲೆಯ ಎಲ್ಲಾ ಸಂಘಟನೆಗಳ ಮುಖಂಡರು, ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
