ರಾಮನಗರ: ಹೊಟ್ಟೆಪಾಡಿಗೆಂದು ದುಡಿಯಲು ಬಂದಿದ್ದ ಬೇರೆ ರಾಜ್ಯದ ಕೂಲಿ ಕಾರ್ಮಿಕರು ಸೇರಿದಂತೆ ಕರ್ನಾಟಕ ರಾಜ್ಯದ ಕಾರ್ಮಿಕರು ಇಂದು ಗುರುವಾರ (ಜು. 02) ಕಲ್ಲು ಕ್ವಾರಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
ಮಾದಪಟ್ಟಣ ಗ್ರಾಮದ ಬಳಿಯ ಕಾವೇರಿ ಕ್ರಷರ್‌ನಲ್ಲಿ ನಡೆದ ದುರಂತದಲ್ಲಿ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಳಗ್ಗಿನ ಜಾವ ಏಕಾಏಕಿ ಬಂಡೆ ಕುಸಿದ ಪರಿಣಾಮ ಅವಶೇಷಗಳಡಿ ಕಾರ್ಮಿಕರು ಸಿಲುಕಿದ ಪ್ರಮಾಣ ಸಾವು ನೋವುಗಳು ಹೆಚ್ಚಿವೆ. ಅವಘಡದಲ್ಲಿ ಮೃತಪಟ್ಟವರನ್ನು ರಾಮು (46), ರಾಜಪಾಲ್ ಸಿಂಗ್ (35), ಸತ್ಯನಾರಾಯಣ ಸಿಂಗ್ (31), ರಾಮ ವತಾರ್ ಸಿಂಗ್ (31), ರಾಜೇಂದ್ರ ಪ್ರಸಾದ್, ನೂಹರ್ ಸಿಂಗ್ ಮತ್ತು ಭುವನೇಶ್ವರ ಸಿಂಗ್ ಎಂದು ಗುರುತಿಸಲಾಗಿದೆ.
ದುರಂತದಲ್ಲಿ ಉತ್ತರ ಭಾರತದ ನಾಲ್ವರು, ಕರ್ನಾಟಕದ ಓರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಾದ ಗುಲಾಬ್ ಸಿಂಗ್ (27), ರಾಜ್ ಪಾಲ್ (30), ಚೋಟು (24), ನೋಹರ್ ಸಿಂಗ್ (21), ಆನಂದ್ (30) ಅವರನ್ನು ಮೈಸೂರು ರಸ್ತೆಯಲ್ಲಿರುವ ಆರ್.ಆರ್.ಆಸ್ಪತ್ರೆಗೆ ದಾಖಲಸಿಸಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಓರ್ವ ಕೂಲಿ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಬಂಡೆ ಬಿದ್ದ ರಭಸಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿದ್ದರೆ, ಮೂರು ಟ್ಯಾಕ್ಟರ್ಳು ಸಂಪೂರ್ಣ ಜಖಂಗೊಂಡಿವೆ.
ಘಟನಾ ಸ್ಥಳಕ್ಕೆ ಭೇಟಿ ಬಳಿಕ ಮಾತನಾಡಿರುವ ಕೇಂದ್ರ ವಲಯ ಐಜಿಪಿ ಎಸ್.ಗಿರೀಶ್, ತಾವರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎರಡು ಕ್ವಾರಿಯಲ್ಲಿ ಕೆಲಸ ನಡೆಯುತ್ತಿತ್ತು. ಕೆಳಗಡೆ ಇದ್ದ ಕ್ವಾರಿಯಲ್ಲಿ 16 ಕಾರ್ಮಿಕರು ಕೆಲಸ ಮಾಡ್ತಿದ್ದರು. ಬಂಡೆ ಬಿದ್ದು 16 ಕಾರ್ಮಿಕರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ ಎಂದವರು ಹೇಳಿದ್ದಾರೆ.
ಕಲ್ಲು ಕ್ವಾರಿ ದುರಂತಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. 7 ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ.
