ಗ್ಯಾರಂಟಿ ಯೋಜನೆ ಫಲಾನುಭವಿಗಳ ಮರು ಪರಿಶೀಲಿಸಿ, ಸೌಲಭ್ಯ ನೀಡಿ
ಶಹಾಪುರ: ಅರ್ಹ ಫಲಾನುಭವಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಕಲ್ಪಿಸುವ ಹಿನ್ನೆಲೆಯಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಗಳಿಗೆ ನೋಂದಣಿಯಾದ ಫಲಾನುಭವಿಗಳನ್ನು ಗ್ಯಾರಂಟಿ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಮರು ಪರಿಶೀಲಿಸಿ, ಸೌಲಭ್ಯಗಳನ್ನು ಒದಗಿಸಬೇಕು ಎಂದು ಪಂಚ ಗ್ಯಾರಂಟಿ ಅನುಷ್ಠಾನ ತಾಲೂಕ ಸಮಿತಿ ಅಧ್ಯಕ್ಷ ಕೃಷ್ಣಪ್ಪಗೌಡ ಅಲ್ಲಾಳ ಸೂಚಿಸಿದರು.
ತಾಲೂಕ ಪಂಚಾಯತ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೃಹ ಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಕೊಂಡ ಫಲಾನುಭವಿಗಳಿಗೆ ತಿಂಗಳ ವಿದ್ಯುತ್ ಬಿಲ್ ಶೂನ್ಯವೆಂದು ಮನೆಗೆ ಭೇಟಿ ನೀಡಿದಾಗ, ಆ ಫಲಾನುಭವಿಗಳ ಆಧಾರ್ ಕಾರ್ಡ್ ಹಾಗೂ ಓಟರ್ ಐಡಿ ಪಡೆದು ಪರಿಶೀಲಿಸಿ, ಮರು ನೋಂದಣಿ ಮಾಡಲಾಗುತ್ತಿದೆ. ಈ ಪ್ರಕ್ರಿಯೆ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದು ಜಸ್ಕಾಂ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಹಳ್ಳಿಗಳಲ್ಲಿ ಇನ್ನೂ ಕೆಲವು ಮನೆಗಳಿಗೆ ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಸಿಗುತ್ತಿಲ್ಲ, ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಭಾರಿ ಚರ್ಚಿಸಿದರೂ ಇಲಾಖೆಯಿಂದ ಸೂಕ್ತ ಪರಿಹಾರ ಸಿಗುತ್ತಿಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರೊಬ್ಬರು ಪ್ರಶ್ನಿಸಿದರು. ಆಗ ಹೊಸದಾಗಿ ರಚನೆಯಾದ ಬಡಾವಣೆಗಳಿಗೆ, ಬಡಾವಣೆಯ ಮಾಲೀಕನೇ ವಿದ್ಯುತ್ ಸೌಲಭ್ಯ ಒದಗಿಸುವ ನಿಯಮವಿದೆ ಎಂದು ತಿಳಿಸಿದರು.
ತಾಲೂಕಿನ ತಿಪ್ಪನಹಳ್ಳಿ ಗ್ರಾಮದ ಶಾಲಾ ಮಕ್ಕಳಿಗೆ ಬಸ್ ಸೌಲಭ್ಯದ ಕೊರತೆಯಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ ಓದಿಗಾಗಿ ಆ ಗ್ರಾಮದ ಮಕ್ಕಳಿಗೆ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಬಸ್‌ಗಳನ್ನು ಬಿಡುವ ಮೂಲಕ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಮಲ್ಲನಗೌಡ ತಿಪ್ಪನಹಳ್ಳಿ ಸಭೆಯಲ್ಲಿ ಮನವಿ ಮಾಡಿದರು.
ಅನ್ನಭಾಗ್ಯ ಯೋಜನೆಯಡಿ ತಾಲೂಕಿನ ಎಲ್ಲಾ ಪಡಿತರ ಅಂಗಡಿಗಳಲ್ಲಿ ಯೋಜನೆಯ ನಿಯಮಾನುಸಾರ ಎಲ್ಲಾ ಫಲಾನುಭವಿಗಳಿಗೆ ಪಡಿತರ ವಿತರಣೆಯಾಗುತ್ತಿದೆ. ಹೀಗಾಗಿ ಶೇ.100ರಷ್ಟು ಫಲಾನುಭವಿಗಳು ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವುದು ಇಲಾಖೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದರು.
ಈ ವೇಳೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಬಸವರಾಜ ಕರಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಶರಣಗೌಡ ಅಣಬಿ, ಮಲ್ಲಣ್ಣಗೌಡ ತಿಪ್ಪನಹಳ್ಳಿ, ರಮೇಶ ಗುರಿಕಾರ, ರಾಯಪ್ಪ ಗಂಗನಾಳ, ಚನ್ನಬಸಪ್ಪ ಜಾಯಿ, ಹುಸೇನ್ ಭಾಷಾ, ಬಸವರಾಜ ಕಂದಳ್ಳಿ, ಶ್ರೀಮತಿ ತಾಯಮ್ಮ ಶ್ರೀಕಾಂತ, ಹನುಮಂತರಾಯ ಹೊನಸ್ಗಿ, ಬಸನಗೌಡ, ಬಸಣ್ಣ ಮಲ್ಲಯ್ಯ ಭಂಗಿ, ಸಿದ್ದಣ್ಣ ದೇಸಾಯಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಇದ್ದರು.
