ಬೆಂಗಳೂರು: ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಸ್ಥಾಪಿಸಬೇಕು ಎಂದು ಬೌದ್ಧ ಬಿಕ್ಕುಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ಜಿಗ್ಮೇಟ್ ವಾಂಗ್ಡೋಸ್ ಜ್ಯೋತಿ ಅವರ ನೇತೃತ್ವದಲ್ಲಿ ದೇಶದ ವಿವಿಧ ರಾಜ್ಯಗಳ ಬೌದ್ಧ ಬಿಕ್ಕುಗಳನ್ನು ಒಳಗೊಂಡ ನಿಯೋಗವು ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಮನವಿ ಪತ್ರವನ್ನು ನೀಡಿತು. ಈ ಸಂದರ್ಭದಲ್ಲಿ ಬೌದ್ಧ ಬಿಕ್ಕುಗಳಾದ ಲೋಬ್ಸಂಗ್ ನೋರ್ಬು, ಪ್ಯಾನಿಚೈಟೊ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
2026-27ನೇ ಸಾಲಿನ ಬಜೆಟ್ನಲ್ಲಿ ಬೌದ್ಧ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಅಭಿವೃದ್ಧಿ ಮಂಡಳಿ/ನಿಗಮ ರಚನೆಗೆ ಅವಕಾಶ ಕಲ್ಪಿಸಿರುವುದಕ್ಕೆ ನಿಯೋಗವು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿತು.
ಪ್ರಸ್ತುತ ಬೌದ್ಧ ಅಭಿವೃದ್ಧಿ ನಿಗಮವು ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿದ್ದು, ಕ್ರಿಶ್ಚಿಯನ್ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಬೌದ್ಧ ಅಭಿವೃದ್ಧಿ ನಿಗಮವನ್ನು ತರಬೇಕು ಎಂದು ನಿಯೋಗ ಮನವಿ ಮಾಡಿತು.
ಬೌದ್ಧ ಸಮುದಾಯದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಈ ಕ್ರಮ ಸಹಕಾರಿಯಾಗಲಿದೆ ಎಂದು ನಿಯೋಗ ತಿಳಿಸಿತು.
