ಫಿಲಡೆಲ್ಫಿಯಾ: ಅಮೆರಿಕದ ಫಿಲಡೆಲ್ಫಿಯಾದ ಪೆನ್ಸಿಲ್ವೇನಿಯಾ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುತ್ತಿರುವ ಅಕ್ಕ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನ–2026ಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ದೀಪ ಬೆಳಗಿಸುವ ಮೂಲಕ ಶುಕ್ರವಾರ ಚಾಲನೆ ನೀಡಿದರು.
ವಿಶ್ವದ ವಿವಿಧ ಭಾಗಗಳಿಂದ ಆಗಮಿಸಿರುವ ಕನ್ನಡಿಗರನ್ನು ಒಂದೆಡೆ ಸೇರಿಸುವ ಈ ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಕರ್ನಾಟಕದ ಪರಂಪರೆಯನ್ನು ಪರಿಚಯಿಸುವ ಹಲವು ಕಾರ್ಯಕ್ರಮಗಳು ನಡೆಯಲಿವೆ.
ಸಮಾರಂಭದಲ್ಲಿ ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿರಿಗೆರೆ ಮಠದ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಗಣಿಗ ರವಿಕುಮಾರ್, ಮಾಜಿ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಹಾಗೂ ಬಸನಗೌಡ ಬಾದರ್ಲಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಟಿ.ಎ. ಶರವಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ನಡುವೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಮ್ಮೇಳನ ಮಹತ್ವ ಪಡೆದಿದೆ.
