ನವದೆಹಲಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹಾಗೂ ‘ವೋಟ್ ಚೋರಿ’ ಆರೋಪಗಳ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಬ್ಲಾಕ್ ಆಯೋಜಿಸಲು ಉದ್ದೇಶಿಸಿರುವ ಬೃಹತ್ ರ್ಯಾಲಿಗೆ ಕೆಲವೇ ದಿನಗಳು ಬಾಕಿಯಿರುವಾಗ, ಬಿಜೆಪಿ ನಾಳೆ (ಬುಧವಾರ) ದೆಹಲಿಯಲ್ಲಿ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ನಡೆಸಲು ಸಜ್ಜಾಗಿದೆ.
ಬುಧವಾರ ಸಂಜೆ 4 ಗಂಟೆಗೆ ಚಾಂದನಿ ಚೌಕ್ನಲ್ಲಿ ಪಾದಯಾತ್ರೆ ಆರಂಭವಾಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನೇತೃತ್ವ ವಹಿಸಲಿದ್ದಾರೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ಹರ್ಷ ಮಲ್ಹೋತ್ರಾ, ಸಂಸದರು ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೆರವಣಿಗೆಯಲ್ಲಿ 15 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಚುನಾವಣಾ ಆಯೋಗ ನಡೆಸುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಹಾಗೂ ಈ ಪ್ರಕ್ರಿಯೆಯ ಮೂಲಕ ಮತಗಳ್ಳತನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಕಾಂಗ್ರೆಸ್ ಸೇರಿದಂತೆ ಇಂಡಿಯಾ ಬ್ಲಾಕ್ನ ಪಕ್ಷಗಳು ಆರೋಪಿಸಿವೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದೂ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.
ಆದರೆ, ವಿರೋಧ ಪಕ್ಷಗಳ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ, ಎಸ್ಐಆರ್ ಕುರಿತು ಪ್ರತಿಪಕ್ಷಗಳು ಜನರನ್ನು ದಾರಿತಪ್ಪಿಸುತ್ತಿವೆ ಎಂದು ಪ್ರತಿಪಾದಿಸಿದೆ. ಇದೇ ಹಿನ್ನೆಲೆಯಲ್ಲಿ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಎಂಬ ಘೋಷಣೆಯಡಿ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಿದ್ದು, ನಾಳಿನ ದೆಹಲಿ ಪಾದಯಾತ್ರೆ ಈ ಅಭಿಯಾನದ ಭಾಗವಾಗಿದೆ.
