ನವದೆಹಲಿ: ಭಾರತಕ್ಕೆ ಮೂರು ಬಾರಿ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದ ಖ್ಯಾತ ಪ್ಯಾರಾ ಜಾವೆಲಿನ್ ಎಸೆತಗಾರ ನೀರಜ್ ಯಾದವ್ (42) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಕ್ರೀಡಾ ಲೋಕದಲ್ಲಿ ಆಘಾತ ಮೂಡಿಸಿದೆ.
ವರದಿಗಳ ಪ್ರಕಾರ, ನೀರಜ್ ಯಾದವ್ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ರಸ್ತುತ ದೆಹಲಿಯ ಆಸ್ಪತ್ರೆಯಲ್ಲಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಭಾರತದ ಪ್ಯಾರಾ ಅಥ್ಲೆಟಿಕ್ಸ್ ತಂಡದ ಮುಖ್ಯ ತರಬೇತುದಾರ ಎಸ್. ಸತ್ಯನಾರಾಯಣ ಅವರು ಈ ಘಟನೆಯನ್ನು ದೃಢಪಡಿಸಿದ್ದು, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಫ್55 (F55) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದ ನೀರಜ್ ಯಾದವ್, ಇತ್ತೀಚೆಗೆ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಡೋಪಿಂಗ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಅಮಾನತಿನ ಕಾರಣದಿಂದಾಗಿ ಅವರು ಸ್ಪರ್ಧೆಯಿಂದ ಹೊರಗುಳಿದಿದ್ದರು ಎಂದು ವರದಿಯಾಗಿದೆ.
ಈ ಬೆಳವಣಿಗೆಯಿಂದ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದು ಅವರ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಈ ಕುರಿತು ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ನೀರಜ್ ಯಾದವ್ ಅವರ ಸಾವಿಗೆ ಸಂಬಂಧಿಸಿದ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
