ಬೆಂಗಳೂರು: ಗ್ಯಾರಂಟಿ ಯೋಜನೆಗಳ ವೆಚ್ಚ ಸರಿದೂಗಿಸುವ ನೆಪದಲ್ಲಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೇರುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ ಜನರ ಕ್ಷಮೆಯಾಚಿಸಿ ಅವುಗಳನ್ನು ರದ್ದುಗೊಳಿಸಲಿ ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಆಡಳಿತ ವೈಫಲ್ಯವನ್ನು ಟೀಕಿಸಿದ್ದಾರೆ. ಹಾಲಿನ ದರ ಏರಿಕೆಯಲ್ಲಿ ಸರ್ಕಾರದ ಲೆಕ್ಕಾಚಾರದಲ್ಲಿ ಗೋಲ್ಮಾಲ್ ನಡೆದಿದೆ ಎಂದು ಆರೋಪಿಸಿರುವ ಅವರು, ಲೀಟರ್ಗೆ 8 ರೂ. ಹೆಚ್ಚಳ ಮಾಡುವುದಾಗಿ ಹೇಳಿ ಕೆಲವು ತಳಿಯ ಹಾಲಿನ ದರವನ್ನು 12ರಿಂದ 13 ರೂ.ವರೆಗೆ ಹೆಚ್ಚಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
ಪ್ರಸ್ತುತ ಸ್ಟ್ಯಾಂಡರ್ಡ್ ಹಾಲಿನ ದರ ಲೀಟರ್ಗೆ 52 ರೂ.ನಿಂದ 64 ರೂ.ಗೆ, ಶುಭಂ ಹಾಲಿನ ದರ 53 ರೂ.ನಿಂದ 66 ರೂ.ಗೆ ಹಾಗೂ ಅರ್ಧ ಲೀಟರ್ ಮೊಸರಿನ ದರ 28 ರೂ.ನಿಂದ 34 ರೂ.ಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಬಸ್ ಪ್ರಯಾಣ ದರವನ್ನೂ ಹೆಚ್ಚಿಸುವ ಸಾಧ್ಯತೆಯಿದೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಬೆಂಗಳೂರಿನ ಬಫರ್ ರಸ್ತೆ ಯೋಜನೆಯ ವಿಳಂಬದ ಬಗ್ಗೆಯೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 2025-26ರ ಬಜೆಟ್ನಲ್ಲಿ 3,000 ಕೋಟಿ ರೂ. ವೆಚ್ಚದಲ್ಲಿ 425 ಕಿ.ಮೀ. ಬಫರ್ ರಸ್ತೆ ನಿರ್ಮಿಸುವುದಾಗಿ ಘೋಷಿಸಲಾಗಿತ್ತು. ಮೊದಲ ಹಂತದ 67.69 ಕಿ.ಮೀ. ಕಾಮಗಾರಿಗೆ ಕಾರ್ಯಾದೇಶ ನೀಡಿದ್ದರೂ, ಈವರೆಗೆ ಕೇವಲ 10 ಕಿ.ಮೀ. ವ್ಯಾಪ್ತಿಯಲ್ಲಿ ಮಾತ್ರ ಕೆಲಸ ಆರಂಭವಾಗಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ 1.50 ಕೋಟಿ ದಾಟಿದ್ದು, ಪ್ರತಿದಿನ 2,700ಕ್ಕೂ ಹೆಚ್ಚು ಹೊಸ ವಾಹನಗಳು ರಸ್ತೆಗಿಳಿಯುತ್ತಿವೆ. ಸಂಚಾರ ದಟ್ಟಣೆ ಮತ್ತು ಪ್ರವಾಹ ಸಮಸ್ಯೆ ಹೆಚ್ಚುತ್ತಿದ್ದರೂ ಸರ್ಕಾರ ‘ಬ್ರ್ಯಾಂಡ್ ಬೆಂಗಳೂರು’ ಹೆಸರಿನಲ್ಲಿ ಪ್ರಚಾರಕ್ಕೆ ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಆಡಳಿತದಿಂದ ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಹೋಗುತ್ತಿದೆ. ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಸುಳ್ಳು ಭರವಸೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.
