ಚಿತ್ರದುರ್ಗ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ದೊಡ್ಡಚೆಲ್ಲೂರು ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಚಂದ್ರಪ್ಪ ಅವರ ನಿವಾಸಕ್ಕೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಸ್ಥಳೀಯ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಸಚಿವರು, ಮೃತ ಚಂದ್ರಪ್ಪ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಗೌರವ ಸಲ್ಲಿಸಿದರು. ದುಃಖತಪ್ತ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ, ಸರ್ಕಾರದಿಂದ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ತಕ್ಷಣ ಕಾರ್ಯಾಚರಣೆ ಕೈಗೊಂಡು ಚಿರತೆಯನ್ನು ಶೀಘ್ರವಾಗಿ ಸೆರೆಹಿಡಿಯುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಲ್ಲದೆ, ಚಿರತೆ ದಾಳಿಯಿಂದ ಮೃತಪಟ್ಟ ಚಂದ್ರಪ್ಪ ಅವರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಹಾಗೂ ಅಗತ್ಯ ಆರ್ಥಿಕ ನೆರವನ್ನು ಯಾವುದೇ ವಿಳಂಬವಿಲ್ಲದೆ ಬಿಡುಗಡೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕರ ಜೀವ ಮತ್ತು ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವ ಟಿ. ರಘುಮೂರ್ತಿ ಅವರು ತಿಳಿಸಿದರು.
