ನವದೆಹಲಿ: ಕಳೆದ 12 ವರ್ಷಗಳಲ್ಲಿ ದೇಶದಲ್ಲಿ ಬಡತನ ನಿವಾರಣೆಗೆ ಕೈಗೊಂಡ ಕ್ರಮಗಳಿಂದ ಸುಮಾರು 50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಇದು ಭಾರತದ ಅಭಿವೃದ್ಧಿಯ ದಿಕ್ಕಿನಲ್ಲಿ ಮಹತ್ವದ ಸಾಧನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ‘ದೀಪಾವಳಿ ಮಿಲನ್’ ಕಾರ್ಯಕ್ರಮದಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಅವರು, ವಿಶ್ವಬ್ಯಾಂಕ್ನ ಇತ್ತೀಚಿನ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಿದರು.
2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಕಳೆದ 12 ವರ್ಷಗಳಲ್ಲಿ 50 ಕೋಟಿ ಜನರನ್ನು ಬಡತನದಿಂದ ಹೊರತರಲು ಸಾಧ್ಯವಾಗಿದ್ದರೆ, ಮುಂದಿನ 20 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತ ಇಂದು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್ಅಪ್ ಕೇಂದ್ರವಾಗಿ ಗುರುತಿಸಿಕೊಂಡಿದೆ. ಜಗತ್ತಿನ ಅತಿದೊಡ್ಡ ರಿಯಲ್ಟೈಮ್ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಹೊಂದಿದ್ದು, ಮೂರು ಕೋಟಿ ಲಖ್ಪತಿ ದೀದಿಗಳನ್ನು ಸೃಷ್ಟಿಸುವ ಗುರಿಯನ್ನೂ ಸಾಧಿಸಲಾಗಿದೆ. ಶೌಚಾಲಯ, ಅಡುಗೆ ಅನಿಲ ಸಂಪರ್ಕ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಗಣನೀಯ ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
2014ರವರೆಗೆ ಶೇ.30ರಷ್ಟಿದ್ದ ರೈಲ್ವೆ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಹೆದ್ದಾರಿ ಮತ್ತು ಸಾರಿಗೆ ಕ್ಷೇತ್ರದಲ್ಲೂ ಮಹತ್ವದ ಬದಲಾವಣೆಗಳಾಗಿವೆ ಎಂದರು.
ವಿಶ್ವಬ್ಯಾಂಕ್ ವರದಿಯ ಪ್ರಕಾರ, 2011ರಿಂದ 2023ರ ಅವಧಿಯಲ್ಲಿ 49.6 ಕೋಟಿ ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ. ಇದೇ ಅವಧಿಯಲ್ಲಿ ತೀವ್ರ ಬಡತನದ ಪ್ರಮಾಣ ಶೇ.27.1ರಿಂದ ಶೇ.2.6ಕ್ಕೆ ಇಳಿಕೆಯಾಗಿದೆ.
ದೇಶದ ಅಭಿವೃದ್ಧಿ ಸಾಧನೆಗಳನ್ನು ಜನರಿಗೆ ತಲುಪಿಸುವಂತೆ ಪತ್ರಕರ್ತರಿಗೆ ಮನವಿ ಮಾಡಿದ ಮೋದಿ, ಮಾದಕವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವಲ್ಲಿಯೂ ಮಾಧ್ಯಮಗಳು ಸಕ್ರಿಯ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.
