ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಸಚಿವರು ಹಗುರವಾಗಿ ಮತ್ತು ಬೇಜವಾಬ್ದಾರಿಯಿಂದ ಮಾತನಾಡುವ ಮೂಲಕ ರಾಜ್ಯದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ಪ್ರಧಾನಿಗಳ ಬಗ್ಗೆ ಮನಸೋ ಇಚ್ಛೆ ಮಾತನಾಡುವ ಮೂಲಕ ಕಾಂಗ್ರೆಸ್ ನಾಯಕರು ತಮ್ಮ ಘನತೆಯನ್ನು ತಾವೇ ಕುಗ್ಗಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಚಿವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಹಾಗೂ ಪ್ರಧಾನಿಗಳ ಭೇಟಿಯ ಸಂದರ್ಭದಲ್ಲಿ ಗೌರವಕ್ಕೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಬಾರದು ಎಂದು ಅವರು ಆಗ್ರಹಿಸಿದರು.
ಮೆಟ್ರೋ ಯೋಜನೆಗೆ ಅನುದಾನ ಹಂಚಿಕೆ ವಿಚಾರವಾಗಿ ಸಚಿವರಾದ ಕೃಷ್ಣಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಜಯೇಂದ್ರ, ಬೆಂಗಳೂರಿನ ಅಭಿವೃದ್ಧಿಗೆ ಕಳೆದ ಮೂರೂವರೆ ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿ ಹೊಂದಿರುವ ಕೃಷ್ಣಬೈರೇಗೌಡರು, ಕಳೆದ ಮೂರೂವರೆ ವರ್ಷಗಳಲ್ಲಿ ನಗರಾಭಿವೃದ್ಧಿಗೆ ಎಷ್ಟು ಅನುದಾನ ನೀಡಿದ್ದಾರೆ ಮತ್ತು ಯಾವೆಲ್ಲ ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ ಎಂಬುದನ್ನು ಮೊದಲು ಜನರ ಮುಂದೆ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ತಮ್ಮ ಭಾಷಣವನ್ನು ಕಟ್ ಮಾಡಿ ಮಾತನಾಡಲಾಗಿದೆ ಎಂಬ ಕೃಷ್ಣಬೈರೇಗೌಡರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ ಅವರು, ಮೆಟ್ರೋ ಅನುದಾನದಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸುವ ಮೊದಲು ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ನೀಡಿರುವ ಅನುದಾನದ ಬಗ್ಗೆ ತಿಳಿದುಕೊಳ್ಳಲಿ ಎಂದರು. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳಿಗೂ ಆಕ್ಷೇಪ ವ್ಯಕ್ತಪಡಿಸಿದ ವಿಜಯೇಂದ್ರ, ನಾಲಿಗೆ ಇದೆ ಎಂದು ಮನಬಂದಂತೆ ಮಾತನಾಡುವುದು ಸರಿಯಲ್ಲ. ತಮ್ಮ ಇಲಾಖೆಯಲ್ಲಿ ಸಮರ್ಪಕವಾಗಿ ಕೆಲಸ ಮಾಡಿ ಸಾಮರ್ಥ್ಯ ಸಾಬೀತುಪಡಿಸಲಿ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್ ನಾಯಕರ ಬೇಜವಾಬ್ದಾರಿತನದಿಂದಲೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ಪ್ರಧಾನಿಗಳ ಸ್ವಾಗತಕ್ಕೆ ಜನರ ಸ್ವಯಂಪ್ರೇರಿತ ಆಗಮನ
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೊದಲಿಗೆ ಪ್ರಶಾಂತಿ ಕುಟೀರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ನಂತರ ಬೆಂಗಳೂರಿನಲ್ಲಿ ಮೆಟ್ರೋ ಉದ್ಘಾಟನೆ ನೆರವೇರಿಸಿ ಮೈಸೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.
ಪ್ರಧಾನಿಗಳನ್ನು ಸ್ವಾಗತಿಸಲು ಬೆಂಗಳೂರಿನ ಮೂರ್ನಾಲ್ಕು ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದಾರೆ. ಬಿಜೆಪಿ ಕಾರ್ಯಕರ್ತರೂ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಇದೇ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಹಾಕಿರುವ ಫ್ಲೆಕ್ಸ್ಗಳನ್ನು ತೆರವುಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಇದು ಕಾಂಗ್ರೆಸ್ನ ರಾಜಕೀಯ ಪ್ರವೃತ್ತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆಗಳ ಕುರಿತು ಬಿಜೆಪಿ ನಿಲುವು
ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಗಳನ್ನು ವಾಪಸ್ ಪಡೆಯುವ ವಿಚಾರದಲ್ಲಿ ಬಿಜೆಪಿ ಮುಂದಿನ ದಿನಗಳಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಲಿದೆ ಎಂದು ವಿಜಯೇಂದ್ರ ಹೇಳಿದರು.
ಅಲ್ಪಸಂಖ್ಯಾತರಿಗೆ ಸೇನಾ ತರಬೇತಿ ನೀಡಲು ಸರ್ಕಾರ ಮುಂದಾಗಿರುವ ವಿಚಾರದ ಬಗ್ಗೆಯೂ ಆತಂಕ ವ್ಯಕ್ತಪಡಿಸಿದ ಅವರು, ಇಂತಹ ಕ್ರಮಗಳು ಸಮಾಜದಲ್ಲಿ ವಿಭಜನೆಗೆ ಕಾರಣವಾಗಬಾರದು. ಅಲ್ಪಸಂಖ್ಯಾತರನ್ನು ಹಿಂದೂ ಸಮಾಜದಿಂದ ಪ್ರತ್ಯೇಕಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕವಿದೆ. ಸಾಮಾಜಿಕ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
